ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ

UDP-13-8-Chitrakala
Published on

ಸುಗುಣೇಂದ್ರ ತೀರ್ಥ ಶ್ರೀಪಾದರ ಆಶಯ | ಚಿತ್ರಕಲಾ ಸ್ಪರ್ಧೆ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ
ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ನಾಮಕರಣಗೊಂಡು 50 ಸಂವತ್ಸರ ಪೂರೈಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಭಾಷೆಯು ನಾಡಿನ ಕನ್ನಡಿಗರ ಉಸಿರಾಗಲಿ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಆಶಿಸಿದರು.

ಉಡುಪಿಯ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಸುವರ್ಣ ಸಂಭ್ರಮ ಕಾರ್ಯಕ್ರಮದ ನಿಮಿತ್ತ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್​ ಫೋರಂ ಆಶ್ರಯದಲ್ಲಿ ರಾಜಾಂಗಣದಲ್ಲಿ ಮಕ್ಕಳಿಗಾಗಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬಹುಮಾನ ಗಳಿಕೆಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯ. ಸ್ಪರ್ಧಾ ಮನೋಭಾವ ಮಕ್ಕಳಲ್ಲಿರಬೇಕು ಎಂದರು.

ಸುಸಂಸ್ಕೃತ ಪ್ರಜೆಯಾಗಿ

ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾತನಾಡಿ, ಕರಾವಳಿಯು ಬಹು ಭಾಷೆ-ಕಲೆ, ಸಂಸ್ಕೃತಿ ಹೊಂದಿದೆ. ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದರ ಮೂಲಕ ನಮ್ಮ ರಾಷ್ಟ್ರೀಯ ಹಬ್ಬಗಳು, ಆಚಾರ-ವಿಚಾರ, ಸಂಸ್ಕೃತಿ ಮೈಗೊಡಿಸಿಕೊಳ್ಳಬೇಕು. ದೇಶದ ಸುಸಂಸ್ಕೃತ ಪ್ರಜೆಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದರು.

ಚಿತ್ರಕಲಾ ಸ್ಪರ್ಧೆ 2
ಉಡುಪಿಯ ರಾಜಾಂಗಣದಲ್ಲಿ ಮಕ್ಕಳಿಗಾಗಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.

ವಿಜೇತ ಮಕ್ಕಳಿಗೆ ನಗದು ಬಹುಮಾನ ನೀಡಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕಾಮತ್​, ಆರ್ಟಿಸ್ಟ್​ ಫೋರಂ ಉಡುಪಿ ಕಾರ್ಯದರ್ಶಿ ಸಕು ಪಾಂಗಾಳ, ಶ್ರೀಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಉಪಸ್ಥಿತರಿದ್ದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶ್ರೀಕೃಷ್ಣ ಮಠದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಚಾಲಕ ರಮೇಶ್​ ಭಟ್​ ವಂದಿಸಿದರು.

ಮಂಗಳೂರಿನಲ್ಲಿ ಬಹು ಸಂಸ್ಕೃತಿ ಉತ್ಸವ

ಮುಂದಿನ ತಿಂಗಳು ಮಂಗಳೂರಿನಲ್ಲಿ ನಡೆಯುವ ಬಹು ಸಂಸ್ಕೃತಿ ಉತ್ಸವಕ್ಕೆ ಪೂರಕವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತದ ವತಿಯಿಂದ ವಿವಿಧ ಸ್ಪರ್ಧೆ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಈ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ ಬಹುಮಾನ 3 ಸಾವಿರ ರೂ., ದ್ವಿತೀಯ 2 ಸಾವಿರ ರೂ., ತೃತೀಯ ಬಹುಮಾನ 1 ಸಾವಿರ ರೂ. ನಗದು ಹಾಗೂ 5 ಸಮಾಧಾನಕರ ಬಹುಮಾನ ಮತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಅಭಿನಂದನಾ ಪ್ರಮಾಣ ಪತ್ರವನ್ನು ಮಂಗಳೂರು ವಲಯ ಮಟ್ಟದ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net