

ಮಂಗಳೂರು:
ಪುತ್ತೂರು ಕ್ಷೇತ್ರದಿಂದ ಶಾಫಿ ಕಣಕ್ಕೆ ಪುತ್ತೂರು ಗ್ರಾಮಾಂತರ: ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಎಸ್‌ಡಿಪಿಐ ಪಕ್ಷ ಸ್ಪರ್ಧಿಸಲಿದ್ದು, ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಶಾಫಿ ಬೆಳ್ಳಾರೆ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಶಾಫಿ ಬೆಳ್ಳಾರೆ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ. ಪುತ್ತೂರಿನ ಪಡೀಲಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಶಾಫಿ ಬೆಳ್ಳಾರೆ ಸದ್ಯ ಜೈಲಿನಲ್ಲಿದ್ದರೂ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜೈಲಿನಿಂದಲೂ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಅಲ್ಲಿಂದಲೇ ಉಮೇದುವಾರಿಕೆ ಸಲ್ಲಿಸಿ ಚುನಾವಣೆ ಎದುರಿಸುವ ತೀರ್ಮಾನಕ್ಕೆ ಬರಲಾಗಿದೆ. ಶಾಫಿ ಬೆಳ್ಳಾರೆ ಸ್ಪರ್ಧೆಗೆ ಕಾನೂನು ತೊಡಕುಗಳು ಎದುರಾದಲ್ಲಿ ಕ್ಷೇತ್ರ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್ ಅವರನ್ನು ಸ್ಪರ್ಧೆಗಿಳಿಸುವ ತೀರ್ಮಾನವನ್ನೂ ಕೈಗೊಳ್ಳಲಾಗಿದೆ ಎಂದು ಇಬ್ರಾಹಿಂ ಸಾಗರ್ ತಿಳಿಸಿದ್ದಾರೆ. ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಕ್ಷೇತ್ರ ಸಮಿತಿ ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ಸಭೆಯಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್, ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್, ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಪುತ್ತೂರು ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ರಹೀಂ ಪುತ್ತೂರು, ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಅಶ್ರಫ್ ಬಾವು, ಕ್ಷೇತ್ರ ಸಮಿತಿ ಉಪಾಧ್ಯಕ್ಷ ಹಮೀದ್ ಸಾಲ್ಮರ ಮತ್ತಿತರರು ಉಪಸ್ಥಿತರಿದ್ದರು.
-
ಪ್ರವೀಣ್ ನೆಟ್ಟಾರು ಹೆತ್ತವರ ಆಕ್ಷೇಪ
ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರವೀಣ್ ನೆಟ್ಟಾರು ಅವರ ತಂದೆ, ಶೇಖರ ಪೂಜಾರಿ, ಜು.27ರಂದು ನನ್ನ ಮಗನ ಕೊಲೆ ಮಾಡಲಾಗಿತ್ತು. ನನಗೆ ಮೂರು ಬಾರಿ ಹೃದಯದ ಶಸ್ತ್ರಚಿಕಿತ್ಸೆ ಆಗಿದೆ. ಕಣ್ಣಿನ ದೃಷ್ಟಿ ಮಂದವಾಗಿದೆ. ಕಿವಿ ಕೇಳಿಸುವುದಿಲ್ಲ. ಮಗನನ್ನು ಕೊಲೆ ಮಾಡಿದ ಆರೋಪಿ ಶಾಫಿ ಬೆಳ್ಳಾರೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಹೇಳಿದರು. ಶೇಖರ ಅವರ ಅಭಿಪ್ರಾಯಕ್ಕೆ ಧ್ವನಿಗೂಡಿಸಿದ ಪ್ರವೀಣ್ ಅವರ ತಾಯಿ, ರತ್ನಾವತಿ, ಮಗನನ್ನು ಕೊಂದವರು ಚುನಾವಣೆಯಲ್ಲಿ ಸ್ಪರ್ಧಿಸಿದರೆ ನಮಗೆ ದಾರಿಯಲ್ಲಿ ನಡೆದುಕೊಂಡು ಹೋಗಲು ಕಷ್ಟವಾಗಬಹುದು. ಉಳಿದವರಿಗೂ ಸಮಸ್ಯೆಯೇ. ನಮ್ಮನ್ನು ಈ ಸ್ಥಿತಿಗೆ ತಂದ ಆರೋಪಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಲೇಬಾರದು ಎಂದು ಹೇಳಿದರು.