

ರಾಯಚೂರು: ಕೃಷಿ ವಿಜ್ಞಾನಗಳ ವಿವಿಯಿಂದ ಗುಣಮಟ್ಟದ ಬಿತ್ತನೆ ಬೀಜಗಳನ್ನು ಉತ್ಪಾದಿಸಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಇಳುವರಿ ಪಡೆಯಬೇಕು ಎಂದು ವಿವಿ ಕುಲಪತಿ ಡಾ.ಎಂ.ಹನುಮಂತಪ್ಪ ಹೇಳಿದರು.
ಸ್ಥಳೀಯ ಕೃಷಿ ವಿಜ್ಞಾನಗಳ ವಿವಿ ಬೀಜ ಘಟಕದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹಿಂಗಾರು ಬೀಜ ದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿವಿ ರೈತರ ಅಭಿವೃದ್ಧಿಗೆ ಪಣ ತೊಟ್ಟು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರೈತರು ವಿವಿಯ ವಿಜ್ಞಾನ ಕೇಂದ್ರ ಮತ್ತು ಸಂಶೋಧನಾ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದರು.
ಬೀಜ ಘಟಕದ ವಿಶೇಷಾಕಾರಿ ಡಾ.ಅರುಣಕುಮಾರ ಹೊಸಮನಿ ಮಾತನಾಡಿ, ಹಿಂಗಾರು ಹಂಗಾಮು ಆರಂಭವಾಗುತ್ತಿರುವ ಹಿನ್ನೆಲೆಯ್ಲಿ ರೈತರಿಗೆ ಬಿತ್ತನೆ ಬೀಜ, ಹಿಂಗಾರು ಬೆಳೆಗಳ ಬಗ್ಗೆ ತಾಂತ್ರಿಕ ಮಾಹಿತಿ ಮತ್ತು ಕೃಷಿ ಚಟುವಟಿಕೆ ಕುರಿತು ಮಾಹಿತಿ ನೀಡಲು ಬೀಜ ದಿನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವಿವಿ ಸಂಶೋಧನಾ ನಿರ್ದೇಶಕ ಡಾ.ಬಿ.ಕೆ.ದೇಸಾಯಿ ಮಾತನಾಡಿ, ವಿವಿ ಆರಂಭದಿಂದಲೂ ರೈತರಿಗಾಗಿ ವಿನೂತನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು, ರೈತರು ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಬೆಳೆಗಳಿಗೆ ಬೇಕಾಗಿರುವ ಗುಣಮಟ್ಟದ ಬೀಜಗಳು ಮತ್ತು ಸುಧಾರಿತ ಕೃಷಿ ತಂತ್ರಜ್ಞಾನಗಳನ್ನು ಮುಟ್ಟಿಸಲು ಬೀಜ ದಿನೋತ್ಸವ ಸಹಕಾರಿಯಾಗಿದೆ ಎಂದು ಹೇಳಿದರು.
ಕೃಷಿ ವಿಜ್ಞಾನಗಳು ರೈತರಿಗೆ ಬಿತ್ತನೆ, ಬೆಳೆ ನಿರ್ವಹಣೆ, ಸಂಸ್ಕರಣೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಎಸ್.ಎಂ.ಸಿದ್ದಾರೆಡ್ಡಿ, ವಿವಿ ಸಹ ಸಂಶೋಧನಾ ನಿರ್ದೇಶಕ ಡಾ.ಎ.ಆರ್.ಕುರಬರ, ಸಹಾಯಕ ಕೃಷಿ ನಿರ್ದೇಶಕಿ ಸುಧಾ ಮಾಡಲಗೇರಿ, ಕರ್ನಾಟಕ ರಾಜ್ಯ ಬೀಜ ನಿಗಮದ ಉಪ ವ್ಯವಸ್ಥಾಪಕ ಪ್ರಭು ತುರಾಯಿ ಹಾಗೂ ವಿವಿ ಪ್ರಾಧ್ಯಾಪಕರು ಉಪಸ್ಥಿತರಿದ್ದರು.