

ಕುಷ್ಟಗಿ: ಕ್ರಿಯಾ ಯೋಜನೆಯಂತೆ ಕಾಮಗಾರಿ ನಿರ್ವಹಿಸಿ ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಅವರು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಭಾನುವಾರ ಮಾತನಾಡಿದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯ 2023-24ನೇ ಸಾಲಿನ 3ಕೋಟಿ ರೂ. ಅಂದಾಜು ವೆಚ್ಚದಲ್ಲಿ ಪಟ್ಟಣದ 1-7ನೇ ವಾರ್ಡ್‌ಗಳಲ್ಲಿ ಸಿಸಿ ರಸ್ತೆ, ಡಾಂಬರ್ ರಸ್ತೆ ನಿರ್ಮಾಣ ಹಾಗೂ ಚರಂಡಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.
ಗುಣಮಟ್ಟದ ಕಾಮಗಾರಿ ಕೈಗೊಳ್ಳುವ ಮೂಲಕ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗದಂತೆ ನೋಡಿಕೊಳ್ಳಿ ಎಂದು ಹೇಳಿದರು. ಮಾಜಿ ಅಧ್ಯಕ್ಷ ಜಿ.ಕೆ.ಹಿರೇಮಠ, ಪ್ರಮುಖರಾದ ಶಶಿಧರ ಕವಲಿ, ಹನುಮೇಶ ಕುಲಕರ್ಣಿ, ಪ್ರಭುಶಂಕರಗೌಡ ಪಾಟೀಲ್ ಇತರರು ಇದ್ದರು.