ಪ್ರಮಾಣ ಪತ್ರ ನೀಡಿದರೆ ಮಾತ್ರ ಸಾಲಸೌಲಭ್ಯ

2manju21-Web
ಬೆಳಗಾವಿ ಜಿಪಂ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಸಮಿತಿ ಅಧ್ಯಕ್ಷ ಫಕೀರಪ್ಪ ಹದ್ದಣ್ಣವರ ಮಾತನಾಡಿದರು. ಸದಸ್ಯ ಗೋವಿಂದ ಕೊಪ್ಪದ, ಶಂಕರ ಮಾಡಲಗಿ ಮತ್ತಿತರರು ಇದ್ದರು.
Published on

ಬೆಳಗಾವಿ: ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಸಾಲ ಸೌಲಭ್ಯ ನೀಡುತ್ತಿಲ್ಲ. ರೈತರಿಗೆ ಬೆಳೆಸಾಲ ನೀಡಲು ಪ್ರಮಾಣ ಪತ್ರ ಕೇಳುತ್ತಿರುವ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸದಸ್ಯರು ಆಗ್ರಹಿಸಿದ್ದಾರೆ.

ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸದಸ್ಯರು ರಾಷ್ಟ್ರೀಕೃತ ಬ್ಯಾಂಕ್‌ಗಳು ಸಾಲ ನೀಡುವ ಮುನ್ನ ನಾನಾ ರೀತಿಯ ದಾಖಲೆ ಕೇಳುತ್ತಿದ್ದಾರೆ. ಇದರಿಂದ ಯಾರಿಗೂ ಸಾಲ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಿತಿ ಸದಸ್ಯ ಗೋವಿಂದ ಕೊಪ್ಪದ ಮಾತನಾಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರಿಗೆ 3 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ. ಆದರೆ, ರಾಷ್ಟ್ರೀಕೃತ ಬ್ಯಾಂಕ್‌ಗಳು ಬೆಳೆಸಾಲ ನೀಡಲು ಕೃಷಿ ಪತ್ತಿನ ಸಹಕಾರಿ ಬ್ಯಾಂಕ್‌ಗಳ ಪ್ರಮಾಣ ಪತ್ರ ಕೇಳುತ್ತಿವೆ. ಇದರಿಂದ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಮೊದಲಿನಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳು ಸಾಲ ಸೌಲಭ್ಯ ನೀಡಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಫಕೀರಪ್ಪ ಹದ್ದಣ್ಣವರ ಮಾತನಾಡಿ, ಮುಂಬರುವ ದಿನದಲ್ಲಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳ ಮಾಹಿತಿ, ಅನುದಾನ, ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಕಡ್ಡಾಯವಾಗಿ ಆಯಾ ಗ್ರಾಪಂಗಳ ಆವರಣದಲ್ಲಿ ಪ್ರಕಟಿಸಬೇಕು.

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳಲ್ಲಿನ ಸೌಲಭ್ಯಗಳ ಕುರಿತು ಗ್ರಾಮೀಣ ಪ್ರದೇಶದ ಜನರಿಗೆ ಮಾಹಿತಿ ಸಿಗುತ್ತಿಲ್ಲ. ಪ್ರತಿ ವರ್ಷ ಸಾಕಷ್ಟು ಅನುದಾನ, ಸೌಲಭ್ಯಗಳಿದ್ದರೂ ಸಕಾಲಕ್ಕೆ ಅರ್ಹರಿಗೆ ಸಿಗುತ್ತಿಲ್ಲ. ಹಾಗಾಗಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮೀಣ ಭಾಗದ ಜನರಿಗೆ ಸೌಲಭ್ಯ ಸಿಗುವಂತೆ ಕ್ರಮವಹಿಸಬೇಕು ಎಂದರು.

ಸಮಿತಿ ಸದಸ್ಯ ಶಂಕರ ಮಾಡಲಗಿ, ಸುರೇಶ ಮ್ಯಾಗೇರಿ, ಜಿಪಂ ಉಪ ಕಾರ್ಯದರ್ಶಿ ಡಿ.ಎಂ.ಜಕ್ಕಪ್ಪಗೋಳ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net