

ಬೆಂಗಳೂರು ಗ್ರಾಮಾಂತರ: ದೌರ್ಜನ್ಯಕ್ಕೊಳಗಾದವರಿಗೆ ತ್ವರಿತ ಪರಿಹಾರದ ಜತೆಗೆ ಗೌರವಯುತ ಜೀವನ ನಡೆಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚನೆ ನೀಡಿದರು.
ದೇವನಹಳ್ಳಿ ತಾಲೂಕು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ 2020ನೇ ತ್ರೈಮಾಸಿಕ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ದೌರ್ಜನ್ಯ ಪ್ರಕರಣಗಳಿಗೆ ಆಸ್ಪದ ನೀಡಬಾರದು. ಆದರೂ ಅಂಥ ಪ್ರಕರಣ ನಡೆಯುತ್ತಿವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ತ್ವರಿತವಾಗಿ ಕಾರ್ಯೋನ್ಮುಖರಾಗುವುದರಿಂದ ದೌರ್ಜನ್ಯ ಪ್ರಕರಣಗಳಲ್ಲಿ ಬೇಗ ನ್ಯಾಯ ಹಾಗೂ ಪರಿಹಾರ ದೊರಕಿಸಿಕೊಡಲು ಸಾಧ್ಯವಾಗುತ್ತದೆ. ಈ ವಿಷಯದಲ್ಲಿ ಅಧಿಕಾರಿಗಳ ಪ್ರಾಮಾಣಿಕ ಕರ್ತವ್ಯ ನಿರ್ವಹಣೆ ಮುಖ್ಯ ಎಂದರು.
ಪರಿಶಿಷ್ಟ ಜನಾಂಗದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಡ್ಡಾಯವಾಗಿ ಶಿಕ್ಷೆಯಾಗಬೇಕು. ಇದಕ್ಕೆ ಪೂರಕ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಖಾಸಗಿ ಜಮೀನು ಖರೀದಿ: ಸರ್ಕಾರಿ ಜಮೀನು ಲಭ್ಯವಿಲ್ಲದ ಗ್ರಾಮಗಳಲ್ಲಿ ಖಾಸಗಿ ಜಮೀನು ಖರೀದಿಸಿ ಸ್ಮಶಾನಕ್ಕೆ ಕಾಯ್ದಿರಿಸಲಾಗಿದೆ. ಒತ್ತುವರಿ ಮಾಡಿಕೊಂಡಿರುವ ಸ್ಮಶಾನ ಜಾಗ ತೆರವುಗೊಳಿಸಬೇಕು. ಸ್ಮಶಾನ ಭೂಮಿ ಲಭ್ಯವಿಲ್ಲದ ಜಿಲ್ಲೆಯ ನಾಲ್ಕೂ ತಾಲೂಕುಗಳ ಪೈಕಿ ಈಗಾಗಲೇ ಹಲವು ಕಡೆ ಅಂತ್ಯ ಸಂಸ್ಕಾರಕ್ಕಾಗಿ ಸ್ಮಶಾನ ಭೂಮಿ ಕಲ್ಪಿಸಿಕೊಡಲಾಗಿದೆ ಎಂದು ಡಿಸಿ ಹೇಳಿದರು.
ಸಾರ್ವಜನಿಕರೊಡನೆ ಗೌರವ ಯುತವಾಗಿ ನಡೆದುಕೊಳ್ಳುವುದು ಸರ್ಕಾರಿ ಅಧಿಕಾರಿಗಳ ಕರ್ತವ್ಯ. ಸ್ಥಳೀಯಮಟ್ಟದಲ್ಲೇ ಸಮಸ್ಯೆ ಬಗೆಹರಿಸಿಕೊಳ್ಳಲು ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಇದೇ ವೇಳೆ ಜಿಲ್ಲೆಯಲ್ಲಿ ನಡೆದಿರುವ 32 ದೌರ್ಜನ್ಯ ಪ್ರಕರಣಗಳ ಪೈಕಿ 28 ಪ್ರಕರಣಗಳಿಗೆ 31,93,626 ರೂಪಾಯಿ ಪರಿಹಾರ ಧನ ನೀಡಲಾಗಿದೆ. ಪರಿಹಾರ ಧನ ವಿರತಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಹನುಮಂತರಾಯಪ್ಪ ಸಭೆಗೆ ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್ ಕೆ.ನಾಯಕ್, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.