ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆ

20adarshkdga1
Published on

ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಮಾಅತ್ ಅಧ್ಯಕ್ಷ ಮೊಹಿನುದ್ದೀನ್ ಕಾಂಗ್ರೆಸ್ ಪಕ್ಷವನ್ನು ತೊರೆದು ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಯಾದರು.


ಕುಟ್ಟದಲ್ಲಿ ಆಯೋಜಿಸಿದ್ದ ಜೆಡಿಎಸ್ ಸಭೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಮೊಹಿನುದ್ದೀನ್, ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದರು.


ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಮಾತನಾಡಿ, ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿರವರ ಜನಪರ ಕಾಳಜಿಯನ್ನು ಮೆಚ್ಚಿ ವಿವಿಧ ಪಕ್ಷಗಳ ಪ್ರಮುಖರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಜೆಡಿಎಸ್ ತಕ್ಷಣ ಸ್ಪಂದಿಸಲಿದೆ ಎಂದು ತಿಳಿಸಿದರು.


ಜಿಲ್ಲೆಯ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಪಕ್ಷದ ವತಿಯಿಂದ ಮೊದಲ ಹಂತದ ರಸ್ತೆ ತಡೆ ಪ್ರತಿಭಟನೆ ಮೂರ್ನಾಡಿನಲ್ಲಿ ನಡೆಯಲಿದೆ. ನಂತರ ಕುಟ್ಟದಲ್ಲೂ ಹೋರಾಟ ನಡೆಸುವುದಾಗಿ ಹೇಳಿದರು.


ಪಕ್ಷದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮಾತನಾಡಿ, ದೇಶವ್ಯಾಪಿ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ನಿರ್ಲಕ್ಷಿಸುತ್ತಲೇ ಬರುತ್ತಿದೆ. ಜಾತ್ಯತೀತ ನೆಲೆಗಟ್ಟಿನ ಜೆಡಿಎಸ್ ಮಾತ್ರ ಅಲ್ಪಸಂಖ್ಯಾತರ ಸಂಕಷ್ಟಕ್ಕೆ ಸ್ಪಂದಿಸಲು ಸಾಧ್ಯ ಎಂದರು.


ಕಾಂಗ್ರೆಸ್ ಪ್ರಮುಖರಾದ ಹನೀಫ್ ಹಾಗೂ ಹಂಸ ಕೂಡ ಜೆಡಿಎಸ್‌ಗೆ ಸೇರ್ಪಡೆಗೊಂಡರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಸಿ.ಸುನಿಲ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಆಲಿ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಯೂಸುಫ್ ಕೊಂಡಂಗೇರಿ, ಕುಟ್ಟ ವಿಭಾಗದ ಮುಖಂಡ ರೆನ್ನಿ, ಪೊನ್ನಂಪೇಟೆ ತಾಲ್ಲೂಕು ಅಧ್ಯಕ್ಷ ಪರ್ಮಲೆ ಗಣೇಶ್, ಮಜೀದ್, ಹನೀಫ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net