

ದಾವಣಗೆರೆ: ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ದುರಂತ ಸಾವಿಗೀಡಾಗಿರುವ ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ದುರ್ಘಟನೆ ಜರುಗಿದೆ. ಆರು ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟರೆ, ಓರ್ವ ಪ್ರಯಾಣಿಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಇಂಡಿಕಾ ಕಾರು ಬೆಂಗಳೂರಿನಿಂದ ಬರುತ್ತಿತ್ತು. ಕಾರಿನಲ್ಲಿದ್ದ 6 ಪ್ರಯಾಣಿಕರು ಹಾಗೂ ಓರ್ವ ಡ್ರೈವರ್ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದವರು 20-30ರ ವಯೋಮಾನದ ಯುವಕರು ಎಂದು ತಿಳಿದುಬಂದಿದೆ. ಎಲ್ಲಿಗೆ ಪ್ರಯಾಣಿಸುತ್ತಿದ್ದರು? ಮೃತ ಯುವಕರು ಯಾರು ಯಾರು ಎಂಬುದರ ಬಗ್ಗೆ ಮಾಹಿತಿ ಇನ್ನು ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತರ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. (ದಿಗ್ವಿಜಯ ನ್ಯೂಸ್)