

ಮಳವಳ್ಳಿ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣ ಅನಿವಾರ್ಯವಾಗಿರುವವರಿಗೆ ಮಾತ್ರ ಎನ್ನುವ ವ್ಯವಸ್ಥೆಯಂತಾಗದೇ ಇದಕ್ಕೊಂದು ಹೊಸ ಕಾಯಕಲ್ಪ ನೀಡಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರಿತು ಭವಿಷ್ಯದ ಭಾರತವನ್ನು ನಿರ್ಮಾಣ ಮಾಡುವತ್ತ ಕಾರ್ಯಪ್ರವೃತ್ತವಾಗುವುದರ ಜತೆಗೆ ಮಕ್ಕಳಿಗೆ ಅಕ್ಷರ ಜ್ಞಾನದ ಕಲಿಸುವುದರ ಮೂಲಕ ಪ್ರಾಪಂಚಿಕ ಜ್ಞಾನವನ್ನು ನೀಡಬೇಕು ಎಂದರು.
ಶಿಕ್ಷಣ ಕ್ಷೇತ್ರದಲ್ಲಿ ಪ್ರಸ್ತುತ ಖಾಸಗಿ ಮತ್ತು ಸರ್ಕಾರಿ ಎಂಬ ಎರಡು ವ್ಯವಸ್ಥೆಗಳಿದ್ದು, ಪಾಲಕರು ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಇದಕ್ಕೆ ಪರಿಹಾರ ಎಂಬಂತೆ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಬದಲಾವಣೆಗೆ ತಂದು ನಮ್ಮ ತಾಲೂಕಿನ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ರಾಜ್ಯದ ಇತರೆಡೆಗೆ ಮಾದರಿಯಾಗುವಂತೆ ಮಾಡುವಲ್ಲಿ ನಿಮ್ಮ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿನ ಮೂಲಸೌಕರ್ಯಗಳ ವಿಚಾರದಲ್ಲಿ ಪ್ರಥಮ ಆದ್ಯತೆ ನೀಡಿ ಪ್ರಸ್ತುತ ಶೈಕ್ಷಣಿಕ ವರ್ಷ ಮುಗಿಯುವಷ್ಟರಲ್ಲಿ ತಾಲೂಕಿನ ಯಾವುದೇ ಸರ್ಕಾರಿ ಶಾಲೆಯಲ್ಲೂ ಸಹ ಮೂಲ ಸೌಕರ್ಯ ಕೊರತೆ ಕಂಡು ಬರದಂತೆ ಕ್ರಮ ವಹಿಸುತ್ತೇನೆ ಎಂದ ಅವರು, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಂಬಂಧಿಸಿದಂತೆ ಈಗಾಗಲೇ ಪ್ರತಿಯೊಂದು ಸರ್ಕಾರಿ ಶಾಲೆಗೂ ಡಿಜಿಟಲ್ ಲ್ಯಾಬ್ ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ 25 ಮಲ್ಟಿ ಮೀಡಿಯಾ ಕೇಂದ್ರಗಳನ್ನು ಕ್ಲಸ್ಟರ್‌ಗೆ ಒಂದರಂತೆ ತೆರೆಯಲಾಗುವುದು ಎಂದರು.
ಕಾರ್ಯಕ್ರಮದ ಪ್ರಧಾನ ಭಾಷಣವನ್ನು ಕೊಳ್ಳೇಗಾಲ ಚೇತವನ ಬೌದ್ಧ ವಿಹಾರದ ಮನೋ ರಂಕಿತ ಬಂತೇಜಿ ಮಾಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಜಿ.ಎ.ಲೊಕೇಶ್, ಡಯಟ್ ಪ್ರಾಂಶುಪಾಲ ಕೆ.ಯೋಗೇಶ್, ತಾ.ಪಂ. ಇಒ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ನಾಗೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಸೇರಿದಂತೆ ಇತರರಿದ್ದರು.