ಅಪೌಷ್ಟಿಕತೆ ಹೋಗಲಾಡಿಸಲು ರಾಗಿ ಮಾಲ್ಟ್ ನೆರವು

IMG-20240222-WA0008
Published on

ರಾವಂದೂರು: ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತಲೂ ಗುಣಾತ್ಮಕ ಶಿಕ್ಷಣ ಸಿಗುತ್ತಿದೆ ಎಂದು ತಾಲೂಕು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು.


ಪಿರಿಯಾಪಟ್ಟಣ ತಾಲೂಕು ಕಿತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೆಎಂಎಫ್ ಹಾಗೂ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಮಾಲ್ಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಕಲಿಕೆಗೆ ಪೂರಕ ವಾತಾವರಣ, ನುರಿತ ಶಿಕ್ಷಕರಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಆದರ್ಶ ವಿದ್ಯಾರ್ಥಿಗಳಾಗಬೇಕು ಎಂದು ತಿಳಿಸಿದರು.


ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಬಿಸಿಯೂಟ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರೊಂದಿಗೆ ಪಠ್ಯಪುಸ್ತಕ, ಶೂ, ಸಮವಸ್ತ್ರಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದರು.


ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಸಿ.ಪ್ರಶಾಂತ್ ಮಾತನಾಡಿ, ದೇಶದಲ್ಲೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದರು. ಇದರ ಮೂಲ ಉದ್ದೇಶ ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸುವುದು. ಇದೀಗ ರಾಗಿ ಮಾಲ್ಟ್ ವಿತರಿಸುತ್ತಿರುವುದು ಉತ್ತಮ ಯೋಜನೆಯಾಗಿದೆ ಎಂದರು.


ಕ್ಷೇತ್ರ ಸಮನ್ವಯ ಅಧಿಕಾರಿ ಶಿವರಾಜ್, ಎಸ್‌ಡಿಎಂಸಿ ಅಧ್ಯಕ್ಷ ಚೆಲುವರಾಜು, ಸಿಆರ್‌ಪಿ ಮಲ್ಲಿಕಾರ್ಜುನ್, ಮುಖ್ಯ ಶಿಕ್ಷಕ ರಾಜೇಂದ್ರ, ಶಿಕ್ಷಕರ ಸಂಘದ ನಿರ್ದೇಶಕ ಸೋಮಶೇಖರ್, ಗುರುಮೂರ್ತಿ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net