

ಶಿವಮೊಗ್ಗ: ಎಐಸಿಸಿ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಯಿಂದ ದೇಶಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜನರು ಬಿಜೆಪಿ ಪರ ಇದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಕ್ಕೆ ಮನಸೋತಿದ್ದು ವಿಶ್ವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಹಾಗಾಗಿ ಮುಂದಿನ ಬಾರಿಯೂ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವೇ ಅಧಿಕಾರಕ್ಕೇರಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು 1.38 ಕೋಟಿ ರೂ. ಲಂಚ ಪಡೆದಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪ ಮಾಡುವುದು ಸಹಜ. ಆದರೆ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬೇಕಿದೆ ಎಂದರು.
ಹಿಂದುಳಿದ ವರ್ಗದವರನ್ನು ಸಿಎಂ ಮಾಡಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಇದೇ ವೇಳೆ ತಿರುಗೇಟು ನೀಡಿದ ಅವರು, ನಮ್ಮ ಪ್ರಧಾನಿಯೇ ಹಿಂದುಳಿದ ವರ್ಗದವರಾಗಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಅನೇಕರು ಸಿಎಂ ಆಗಿದ್ದಾರೆ. ಕಾಂಗ್ರೆಸ್ ದೇಶದ ಎರಡೂ ರಾಜ್ಯಗಳಲ್ಲಿ ಮಾತ್ರ ಅಧಿಕಾರದಲ್ಲಿದೆ. ಸಿದ್ದರಾಮಯ್ಯ ಈ ರೀತಿ ಬಾಲಿಶ ಮಾತುಗಳನ್ನು ನಿಲ್ಲಿಸಬೇಕು ಎಂದು ಹೇಳಿದರು.