

ರಾಯಚೂರು: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಘನತೆಯಿಂದ ಬಾಳುವಷ್ಟು ವಸತಿ ದೊರೆತಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಮಾರೆಪ್ಪ ಹರವಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ರಾಜ್ಯದಲ್ಲಿ ಭೂಮಿ ಮತ್ತು ವಸತಿ ವಂಚಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಲವು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದರೂ ಸರ್ಕಾರ ಕ್ರಮಕ್ಕೆ ಮುಂದಾಗಿಲ್ಲ ಆದ್ದರಿಂದ ಭೂಮಿ, ವಸತಿ ವಂಚಿತರ ಸಮಸ್ಯೆಗಳ ಕುರಿತು ಚರ್ಚಿಸಲು ಬೆಂಗಳೂರಿನ ಗಾಂಧೀ ಭವನದಲ್ಲಿ ಅ.5ರಂದು ಪ್ರಾತಿನಿಧ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಅನೇಕ ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ನೀಡಿಲ್ಲ. ಒಂದೆರಡು ಎಕರೆ ಭೂಮಿಯಲ್ಲಿ ಸಾಗುವಳಿ ಮಾಡಿಕೊಳ್ಳುತ್ತಿರುವ ರೈತರ ಮೇಲೆ ಅತಿಕ್ರಮಣದ ಆರೋಪವನ್ನು ಅಧಿಕಾರಿಗಳು ಮಾಡುತ್ತಿದ್ದು, ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುತ್ತಿರುವ ಶ್ರೀಮಂತರ ವಿರುದ್ಧ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದರು. ಈ ಸಂದರ್ಭದಲ್ಲಿ ಪ್ರಮುಖರಾದ ಎಂ.ಆರ್ ಭೇರಿ, ಖಾಜಾ ಅಸ್ಲಂ, ಆಂಜನೇಯ್ಯ ಕುರಬದೊಡ್ಡಿ, ಗೋವಿಂದ ಸೇರಿದಂತೆ ಇತರರಿದ್ದರು.