

ರಾಯಚೂರು: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ 100ಕ್ಕೆ ದಿನಕ್ಕೆ ಕಾಲಿಟ್ಟ ಸಂದರ್ಭ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದಿಂದ ಶನಿವಾರ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸುವ ಮೂಲಕ ಕರಾಳ ದಿನ ಆಚರಿಸಿದರು.
ದೆಹಲಿಯಲ್ಲಿ ರೈತರು ಕಳೆದ 100 ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ರೈತರ ಬೇಡಿಕೆಗೆ ಸ್ಪಂದನೆ ನೀಡುತ್ತಿಲ್ಲ. ಸರ್ಕಾರಿ ತನ್ನ ಕಾರ್ಪೋರೆಟ್ ಕಂಪನಿಗಳ ಪರವಾದ ಆಡಳಿತದಿಂದ ಹಿಂದೆ ಸರಿಯದೆ ಮೊಂಡುತನ ಪ್ರದರ್ಶನ ಮಾಡುತ್ತಿದೆ. ದೆಹಲಿಯಲ್ಲಿ ಆರಂಭವಾದ ಹೋರಾಟ ಈಗ ದೇಶಾದ್ಯಂತ ವ್ಯಾಪಿಸಿದ್ದು, ಸರ್ಕಾರ ತನ್ನ ಮೊಂಡುತನ ಬಿಟ್ಟು ಹೋರಾಟಗಾರರೊಂದಿಗೆ ಮಾತುಕತೆ ನಡೆಸಿ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.