ಬಾಲ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ಚುರುಕಾಗಲಿ: ಡಿಸಿ ಕೆ.ನಿತೀಶ

dc meeting
Published on

ರಾಯಚೂರು: ಜಿಲ್ಲೆಯಲ್ಲಿ ಬಾಲಕಾರ್ಮಿಕ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಇಲಾಖೆಗಳು ಸಮನ್ವಯತೆ ಸಾಧಿಸಿ ಗ್ರಾಮೀಣ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಡಿಸಿ ಕೆ.ನಿತೀಶ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಬಾಲಕಾರ್ಮಿಕ ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ, ಜಿಲ್ಲಾ ಮಟ್ಟದ ಕಾರ್ಯಪಡೆ, ವಾರ್ಷಿಕ ಸಾಮಾನ್ಯ ಸಭೆ ಹಾಗೂ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಶುಕ್ರವಾರ ಮಾತನಾಡಿದರು.

ಈಗಾಗಲೇ ಜಾರಿಯಲ್ಲಿರುವ ಜಿಲ್ಲಾ ಹಾಗೂ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕಾಲಕಾಲಕ್ಕೆ ಕಾರ್ಯಪಡೆ ಸಭೆಯನ್ನು ನಡೆಸಿ, ದಾಳಿಗಳನ್ನು ಕೈಗೊಂಡು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ಚುರುಕಾಗಬೇಕು. ಕೆಲಸಕ್ಕೆ ನೇಮಿಸಿಕೊಂಡ ಮಾಲೀಕರ ವಿರುದ್ಧ ಕ್ರಮಕೈಗೊಳಬೇಕೆಂದು ತಿಳಿಸಿದರು.

ಹದಿನಾಲ್ಕು ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರದ ಜತೆಗೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಿದಾಗ ಮಾತ್ರ ಈ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಎ.ಸಾತ್ವಿಕ್, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ, ಕೃಷಿ ಜಂಟಿ ನಿರ್ದೇಶಕ ಜಯಪ್ರಕಾಶ, ಡಿಎಚ್‌ಒ ಡಾ.ಸುರೇಂದ್ರಬಾಬು, ಸಮಾಜ ಕಲ್ಯಾಣ ಇಲಾಖೆಯ ಡಿಡಿ ಚಿದಾನಂದ, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net