

ರಾಯಚೂರು: ಸಮಾಜದಲ್ಲಿರುವ ಎಲ್ಲ ಸಮುದಾಯಗಳು ಅಭಿವೃದ್ಧಿ ಹೊಂದಬೇಕೆಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಜನರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ನಗರದ ಅಮೀರ್ ಕಾಂಪ್ಲೆಕ್ಸ್‌ನಲ್ಲಿರುವ ನೂತನ ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಬುಧವಾರ ಮಾತನಾಡಿ, ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಂದ ಬರಬೇಕಾದ ಯೋಜನೆಗಳ ಕುರಿತು ಸರ್ಕಾರದ ಗಮನ ಸೆಳೆಯಲಾಗುತ್ತಿದೆ. ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನಪರ ಆಡಳಿತವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಮೌಲಾನಾ ಫರೀದ್ ಖಾನ್, ಜಮಾತೆ ಅಹ್ಲೆ ಸುನ್ನತ್ ರಾಜ್ಯಾಧ್ಯಕ್ಷ ತನ್ವೀರ್ ಹಾಷ್ಮಿ ಸಾಹೇಬ್, ಉರ್ದು ಅಕಾಡೆಮಿಯ ಅಧ್ಯಕ್ಷ ಮುಫ್ತಿ ಹಜರತ್ ಖಾಜಿ ಮೊಹಮ್ಮದ್ ಅಲಿ ಮಿಸ್ಬಾ, ನಗರಸಭೆ ಉಪಾಧ್ಯಕ್ಷ ಸಾಜೀದ್ ಸಾಮೀರ್ ಸೇರಿದಂತೆ ಇತರರಿದ್ದರು.