

ರಾಯಚೂರು: ಗ್ರಾಮೀಣ ಪ್ರದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಕಾರಣ ಅಧಿಕಾರಿಗಳು ಗ್ರಾಮೀಣ ಪ್ರದೇಶದತ್ತ ಹೆಚ್ಚಿನ ಗಮನ ಹರಿಸಿದ್ದಾರೆ. ಸೋಂಕಿತರನ್ನು ಕ್ವಾರಂಟೈನ್ ಕೇರ್‌ಗಳಿಗೆ ಸೇರಿಸುವುದು ಸೇರಿದಂತೆ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಗತ್ಯ ಕ್ರಮಕೈಗೊಳ್ಳುತ್ತಿದ್ದಾರೆ.
ಗ್ರಾಮಾಂತರ ಪ್ರದೇಶದಲ್ಲಿ ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿರಲು ಮನೆಯಲ್ಲಿ ಸೂಕ್ತ ವ್ಯವಸ್ಥೆಯಿಲ್ಲದ ಕಾರಣ ಸೋಂಕು ಹೆಚ್ಚಾಗಿ ಹರಡುತ್ತಿದೆ. ಹೀಗಾಗಿ ಹಿರಿಯ ಅಧಿಕಾರಿಗಳೇ ಖುದ್ದಾಗಿ ಗ್ರಾಮಗಳಲ್ಲಿ ಸಂಚರಿಸಿ ಸೋಂಕಿತರಿಗೆ ಕ್ವಾರಂಟೈನ್ ಕೇರ್‌ಗಳಿಗೆ ತೆರಳುವಂತೆ ಮನವಿ ಮಾಡುತ್ತಿದ್ದಾರೆ. ಅದಕ್ಕೆ ಒಪ್ಪದ ಹಾಗೂ ಆಶಾ ಕಾರ್ಯಕರ್ತೆಯರೊಂದಿಗೆ ಅನುಚಿತವಾಗಿ ವರ್ತನೆ ಮಾಡಿದವರ ಮನೆಯ ವಿದ್ಯುತ್ ಕಡಿತಗೊಳಿಸುವುದು ಹಾಗೂ ಪಡಿತರ ಚೀಟಿಯನ್ನು ರದ್ದುಪಡಿಸುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜತೆಗೆ ಮನೆ ಮನೆ ಸರ್ವೇ ಕಾರ್ಯ ನಡೆಸಿ ಜನರ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಜಿಲ್ಲೆಯ ಸಹಾಯಕ ಆಯುಕ್ತರು, ತಹಸೀಲ್ದಾರ್‌ಗಳು ಸೇರಿದಂತೆ ಇನ್ನಿತರ ಇಲಾಖೆ ಅಧಿಕಾರಿಗಳು ಪ್ರತಿನಿತ್ಯ ಮೂರ್ನಾಲ್ಕು ಗ್ರಾಮಗಳಿಗೆ ಭೇಟಿ ನೀಡುತ್ತಿದ್ದು, ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರಿಗೆ ಅಗತ್ಯ ಮಾರ್ಗದರ್ಶನ ನೀಡುತ್ತಿದ್ದಾರೆ.
ಸಹಾಯಕ ಆಯುಕ್ತ ಸಂತೋಷ ಕಾಮಗೌಡ ಸೋಮವಾರ ತಾಲೂಕಿನ ಜೇಗರಕಲ್ ಮತ್ತು ಮನ್ಸಲಾಪುರ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಪಂ ಟಾಸ್ಕ್‌ಫೋರ್ಸ್ ಸಮಿತಿ ಸದಸ್ಯರೊಂದಿಗೆ ಚರ್ಚಿಸಿ, ಕರೊನಾ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ಪಡೆದರು. ಜಿಲ್ಲಾಡಳಿತ ಕಳೆದ ಒಂದು ವಾರದಿಂದ ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸುತ್ತಿದ್ದು, ಜತೆಗೆ ಗ್ರಾಮಸ್ಥರಿಗೆ ರೋಗ ನಿರೋಧಕ ಮಾತ್ರೆಗಳನ್ನು ವಿತರಿಸುವ ಕಾರ್ಯವನ್ನು ನಡೆಸಲಾಗುತ್ತಿದೆ. ಜತೆಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಜನರಲ್ಲಿ ಮನವರಿಕೆ ಮಾಡುತ್ತಿದೆ.