

ರಾಯಚೂರು: ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇದ್ದು, ಇದರಿಂದ ಅವರನ್ನು ಪಾರುಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಹೇಳಿದರು.
ಹರಿಜನವಾಡ ಸಮುದಾಯ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಗನವಾಡಿ ಮಕ್ಕಳಿಗಾಗಿ ಮಂಗಳವಾರ ಹಮ್ಮಿಕೊಂಡಿದ್ದ ಮಾಸ್ಕ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಳೆದ ಎರಡು ವರ್ಷಗಳಿಂದ ಕೋವಿಡ್‌ನಿಂದಾಗಿ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಮೂರನೇ ಅಲೆಯಿಂದ ಮಕ್ಕಳು ತೊಂದರೆ ಅನುಭವಿಸಬಾರದು. ಅದರಲ್ಲೂ ಅಪೌಷ್ಟಿಕ ಮಕ್ಕಳಿಗೆ ಯಾವುದೇ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕಾದ ಅಗತ್ಯವಿದೆ. ಮಕ್ಕಳಿಗೆ ಕಡ್ಡಾಯವಾಗಿ ಮಾಸ್ಕ್ ಬಳಕೆ, ಪರಸ್ಪರ ಅಂತರ ಕಾಪಾಡಿಕೊಳ್ಳುವಂತೆ ತಿಳಿ ಹೇಳಬೇಕು. ಈ ಕುರಿತು ಪಾಲಕರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಅಂಗನವಾಡಿ ಕಾರ್ಯಕರ್ತೆಯರು ಮಾಡಬೇಕು ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ನಾಜೀಯಾ ಸುಲ್ತಾನ್ ಮಾತನಾಡಿ, ಕರೊನಾ 3ನೇ ಅಲೆ ಮಕ್ಕಳಿಗೆ ಅಪ್ಪಳಿಸಬಾರದೆಂದು ಮುಂಜಾಗ್ರತಾ ಕ್ರಮವಾಗಿ ಅವರಿಗೆ ಮಾಸ್ಕ್ ವಿತರಿಸಲಾಗುತ್ತಿದೆ. ನ್ಯಾಯಾಧೀಶರು ಮಕ್ಕಳಿಗಾಗಿ ಮಾಸ್ಕ್ ದೇಣಿಗೆ ನೀಡಿರುವುದು ಶ್ಲಾಘನೀಯ ಎಂದರು. ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಚ್. ಪದ್ಮಾ ಇತರರು ಇದ್ದರು.