

ರಾಯಚೂರು: ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ನ.28 ಹಾಗೂ 29ರಂದು ಸಿ.ಪಿ.ಐ.ಎಂನ 14ನೇ ಜಿಲ್ಲಾ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ ತಿಳಿಸಿದ್ದಾರೆ.
ಸಮ್ಮೇಳನದ ಹಿನ್ನೆಲೆ ನ.28ರಂದು ನಗರದ ಸಾರ್ವಜನಿಕ ಉದ್ಯಾನದಿಂದ ನಗರದ ಪ್ರಮುಖ ರಸ್ತೆಗಳ ಮೂಲಕ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದವರೆಗೆ ರ‌್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.
ನಂತರ ರಂಗಮಂದಿರದಲ್ಲಿ ಬಹಿರಂಗ ಸಭೆಯನ್ನು ನಡೆಸಲಾಗುತ್ತದೆ. ಸಿ.ಪಿ.ಐ.ಎಂನ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕೆ.ಪ್ರಕಾಶ ಹಾಗೂ ಸೈಯದ್ ಮುಜೀಬ್ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಬಹಿರಂಗ ಸಭೆಯ ನಂತರ ಸಂಜೆ 5 ಗಂಟೆಯಿಂದ ಸಮ್ಮೇಳನದ ಪ್ರತಿನಿಧಿ ಅಧಿವೇಶನವು ನಗರದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಸಮುದಾಯ ಭವನದಲ್ಲಿ ನ.29ರ ಸಂಜೆವರೆಗೂ ನಡೆಯಲಿದೆ ಎಂದು ವೀರೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.