

ರಾಯಚೂರು: ಉದ್ಯಮಿಗಳು ತಮ್ಮ ಉದ್ದಿಮೆಯ ವೃದ್ಧೀಕರಣ ನಿಟ್ಟಿನಲ್ಲಿ ಆಧುನೀಕರಣಕ್ಕೆ ಹೆಚ್ಚಿನ ಒತ್ತು ನೀಡಿದಾಗ ಮಾತ್ರ ಉದ್ದಿಮೆಯನ್ನು ಯಶಸ್ಸಿನತ್ತ ಕೊಂಡೊಯ್ಯಲು ಸಾಧ್ಯ ಎಂದು ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರದ ಜಂಟಿ ನಿರ್ದೇಶಕ ಜಿ.ಯು.ಹುಡೇದ್ ಸಲಹೆ ನೀಡಿದರು.
ಸ್ಥಳೀಯ ಖಾಸಗಿ ಹೋಟೆಲ್‌ನಲ್ಲಿ ಕೌಶಲಾಭಿವೃದ್ಧಿ ಹಾಗೂ ಉದ್ಯಮಶೀಲತೆ ಮಂತ್ರಾಲಯ, ಕೌಶಲಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ ಮತ್ತು ಸಿಡಾಕ್‌ನಿಂದ ಮಂಗಳವಾರ ಹಮ್ಮಿಕೊಂಡಿದ್ದ ಉದ್ಯಮಶೀಲರ ಸಮಾಲೋಚನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ಉದ್ದಿಮೆಯಲ್ಲಿ ವೈವಿಧ್ಯತೆ ಮತ್ತು ಹೊಸತನವನ್ನು ರೂಢಿಸಿಕೊಂಡಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯವಾಗಲಿದೆ. ಸರ್ಕಾರದಿಂದ ಲಭ್ಯವಿರುವ ಯೋಜನೆಗಳ ಸದುಪಯೋಗ ಪಡೆದುಕೊಂಡು ಉದ್ಯಮವನ್ನು ವಿಸ್ತರಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಬಸವರಾಜ ಯಂಕಂಚಿ ಮಾತನಾಡಿ, ಜಿಲ್ಲೆಯಲ್ಲಿ ಉತ್ಪಾದನಾ ಘಟಕಗಳು ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣವಾದಾಗ ಮಾತ್ರ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಯಾಗಲು ಸಾಧ್ಯವಾಗಲಿದೆ. ಉದ್ಯಮಿಗಳು ಉದ್ದಿಮೆ ಪ್ರಾರಂಭಿಸುವ ಮೊದಲು ಸಾಮಾಜಿಕ ಪರಿಕಲ್ಪನೆ ಹೊಂದಿದ್ದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದರು. ಕೌಶಲಾಭಿವೃದ್ಧಿ ಅಧಿಕಾರಿ ರಾಜೇಶ ಬಾವಗಿ ಮಾತನಾಡಿದರು.