ರೈತರ ಸಮಸ್ಯೆ ಗಂಭೀರವಾಗಿ ಪರಿಗಣಿಸಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಆಗ್ರಹ

25092020 Raichur Formars protest
Published on

ಡಿಸಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿಗೆ ಮನವಿ

ರಾಯಚೂರು: ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಪರಿಹಾರಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿಗೆ ಮನವಿ ಸಲ್ಲಿಸಿ, ಕೋವಿಡ್‌ನಿಂದ ಜನರು, ರೈತರು ಆತಂಕದಲ್ಲಿರುವಾಗ ಕೇಂದ್ರ ಮತ್ತು ಸರ್ಕಾರಗಳು ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ಜಾರಿಗೊಳಿಸುತ್ತಿರುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಫಸಲ್ ಭೀಮಾ ಯೋಜನೆಯಡಿ ಹಣ ತುಂಬಿದ ಎಲ್ಲ ರೈತರಿಗೆ ಪರಿಹಾರ ನೀಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ 10 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು. ಸಜ್ಜೆ ಹಾಗೂ ಇನ್ನಿತರ ಬೆಳೆಗಳನ್ನು ಬೆಂಬಲ ಬೆಲೆ ನೀಡಿ ಖರೀದಿಸಬೇಕು. ಮಳೆಯಿಂದ ಹಾನಿಗೊಳಗಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು.

ಎನ್‌ಆರ್‌ಬಿಸಿ 9 ಎ ಕಾಲುವೆ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಂಡ ಭೂಮಿಯ ರೈತರಿಗೆ ಪರಿಹಾರ ನೀಡಬೇಕು. ಹಿಂಗಾರು ಹಂಗಾಮಿಗೆ ಬೇಕಾದ ಎಲ್ಲ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ವಿತರಿಸಬೇಕು. ಮಾನ್ವಿ ತಾಲೂಕಿನಲ್ಲಿ ಸಿಸಿಐ ಹತ್ತಿ ಖರೀದಿ ಕೇಂದ್ರ ಆರಂಭಿಸಬೇಕು.

ಕಳೆದ ವರ್ಷ ನೆರೆ ಹಾವಳಿಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು. ಮಾನ್ವಿ ಮತ್ತು ಸಿರವಾರ ತಾಲೂಕಿಗೆ ತುಂಗಭದ್ರಾ ಎಡದಂಡೆ ಕಾಲುವೆಯಿಂದ ಸಮರ್ಪಕ ನೀರು ಒದಗಿಸಬೇಕು ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net