

ರಾಯಚೂರು: ಶೇ.40 ಕಮೀಷನ್ ದಂಧೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಅಂಬೇಡ್ಕರ್ ವೃತ್ತದ ಬಳಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಬುಧವಾರ ಪ್ರತಿಭಟನೆ ನಡೆಯಿತು.
ನಂತರ ಸಹಾಯಕ ಆಯುಕ್ತ ರಜನಿಕಾಂತ್ ಚವ್ಹಾಣ್‌ಗೆ ಮನವಿ ಸಲ್ಲಿಸಲಾಯಿತು. ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಪಾಟೀಲ್ ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು. ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಲ್ಲ ಇಲಾಖೆಯಲ್ಲಿ ನಡೆಯುವ ಖರೀದಿ, ಕಾಮಗಾರಿಗಳ ಬಿಲ್ ಪಾವತಿಗೆ ಶೇ.40 ಕಮಿಷನ್ ಪಡೆಯಲಾಗುತ್ತಿದೆ. ಈ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರಧಾನಿಗೆ ದೂರು ನೀಡಿದರೂ ಭ್ರಷ್ಟರ ಮೇಲೆ ಕ್ರಮಕೈಗೊಳ್ಳಲಾಗಿಲ್ಲ.
ಕಮೀಷನ್ ದಂಧೆಯ ಪರಿಣಾಮದಿಂದ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಮುನ್ನ ಸಾವಿಗೆ ನೇರವಾಗಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಕಾರಣ ಎಂದು ಡೆತ್‌ನೋಟ್‌ನಲ್ಲಿ ತಿಳಿಸಿದ್ದಾರೆ. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದರೂ ಅವರನ್ನು ಬಂಧಿಸದೆ ರಕ್ಷಣೆ ಮಾಡುವ ಪ್ರಯತ್ನ ನಡೆದಿದೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಶಾಸಕ ಸೈಯದ್ ಯಾಸೀನ್, ಪ್ರಮುಖರಾದ ಶ್ರೀದೇವಿ ನಾಯಕ, ಶಶಿಕಲಾ ಭೀಮರಾಯ, ನಿರ್ಮಲಾ ಬೆಣ್ಣಿ ಇತರರಿದ್ದರು.