

ರಾಯಚೂರು: ಕೃಷಿ ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಪ್ರಚಾರಗೊಳಿಸಿ, ಸಾರ್ವಜನಿಕರಿಗೆ ಯೋಜನೆಗಳು ತಲುಪುವಂತಾಗಬೇಕು ಎಂದು ಜಿಪಂ ಸಿಇಒ ಶಶಿಧರ ಕುರೇರ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಜಲ ಶಕ್ತಿ ಕೇಂದ್ರದ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ 2022-23ನೇ ಸಾಲಿನ ಜಿಲ್ಲಾ ಮಟ್ಟದ ಸಮೂಹ ಮಾಧ್ಯಮ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿವೆ. ಆದರೆ ಯೋಜನೆಗಳ ಸೌಲಭ್ಯಗಳು ಜನಸಾಮಾನ್ಯರಿಗೆ ಸಿಗುತ್ತಿಲ್ಲ. ಆದ್ದರಿಂದ ಯೋಜನೆಗಳ ಕುರಿತು ತಾಲೂಕು ಮಟ್ಟದ ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಮಾಡಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕೆಂದರು.
ಜಿಲ್ಲೆಯ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮಕೈಗೊಳ್ಳಬೇಕು. ಅಲ್ಲದೆ ಕೃಷಿ ಜಮೀನುಗಳಲ್ಲಿ ಬಿತ್ತನೆಗೆ ಬೇಕಾದಂತಹ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ಪೂರೈಕೆಯಾಗುವಂತೆ ನಿಗಾ ವಹಿಸಬೇಕು. ಕೃಷಿ ಇಲಾಖೆ ಅಧಿಕಾರಿಗಳು ಪ್ರತಿದಿನ ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ನಿರ್ದೇಶಿಸಿದರು.