

ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ
ರಾಯಚೂರು: ಗ್ರಾಪಂ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಶಾಂತಿ, ಸುವ್ಯವಸ್ಥೆಯಿಂದ ಎಲೆಕ್ಷನ್ ನಡೆಯುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದರು.
ಕೃಷಿ ವಿಜ್ಞಾನಗಳ ವಿವಿ ಪ್ರೇಕ್ಷಾಗೃಹದಲ್ಲಿ ಗ್ರಾಪಂ ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿ.7ರಂದು ಪ್ರಥಮ ಹಂತದ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಚುನಾವಣೆ ನಡೆಸುವುದು ಸವಾಲಿನ ಕೆಲಸವಾಗಿದ್ದು, ರಾಜ್ಯ ಚುನಾವಣೆ ಆಯೋಗದ ನಿರ್ದೇಶನದಂತೆ ಚುನಾವಣೆ ಪ್ರಕ್ರಿಯೆ ನಡೆಸಬೇಕು. ಮತ ಚಲಾಯಿಸಲು ಆಗಮಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಪರಸ್ಪರ ಅಂತರ ಕಾಪಾಡಬೇಕು. ಸ್ಯಾನಿಟೈಜರ್ ಬಳಕೆ ಮಾಡಬೇಕು. ಮತದಾರರನ್ನು ಸೆಳೆಯಲು ಅಕ್ರಮವಾಗಿ ಹಣ, ಮದ್ಯ ಹಂಚಿಕೆ ಮೇಲೆ ನಿಗಾ ವಹಿಸಬೇಕು ಎಂದರು.
ಅಪರ ಡಿಸಿ ಕೆ.ಎಚ್.ದುರಗೇಶ, ಲಿಂಗಸುಗೂರು ಸಹಾಯಕ ಆಯುಕ್ತ ರಾಜಶೇಖರ್ ಡಂಬಳ, ತಹಸೀಲ್ದಾರ್ ಡಾ.ಹಂಪಣ್ಣ ಹಾಗೂ ಚುನಾವಣೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಇದ್ದರು.