

ರಾಯಚೂರು: ಆಯುರ್ವೇದ ಪದ್ಧತಿಯು ಪ್ರಾಚೀನ ಚಿಕಿತ್ಸಾ ಪದ್ಧತಿಯಾಗಿದ್ದು, ಅಡ್ಡ ಪರಿಣಾಮವಿಲ್ಲದ ಹಾಗೂ ದೀರ್ಘಕಾಲಿಕ ಕಾಯಿಲೆಗಳಿಗೆ ಪರಿಣಾಮಕಾರಿಯಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಪಾಟೀಲ್ ಹೇಳಿದರು.
ನಗರದ ಆಯುರ್ವೇದ ಮತ್ತು ಯುನಾನಿ ಆಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಧನ್ವಂತರಿ ಜಯಂತಿ, ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಂಗಳವಾರ ಮಾತನಾಡಿದರು.
ಆಯುರ್ವೇದ ಪದ್ಧತಿಯು ಪರಂಪರೆಯ ಪ್ರತೀಕವಾಗಿದೆ. ಆರೋಗ್ಯ ರಕ್ಷಣೆ ಹಾಗೂ ಶಿಸ್ತುಬದ್ಧ ಜೀವನಕ್ಕೆ ಉಪಯುಕ್ತವಾಗಿದೆ. ಭಾರತೀಯ ವೈದ್ಯ ಪದ್ಧತಿಗಳಲ್ಲಿ ಆಯುರ್ವೇದ ಚಿಕಿತ್ಸಾ ಪದ್ಧತಿಗೆ ವಿಶೇಷ ಸ್ಥಾನವಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಆಯುರ್ವೇದ ಹೆಚ್ಚು ಪ್ರಚಲಿತವಾಗುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಈ ಪ್ರಾಚೀನ ವೈದ್ಯ ಪದ್ಧತಿಗೆ ಹೆಚ್ಚು ಉತ್ತೇಜನ ನೀಡುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ನರಸಮ್ಮ ಮಾಡಗಿರಿ, ನಿವೃತ್ತ ವೈದ್ಯಾಧಿಕಾರಿ ಡಾ.ಚಂದ್ರಶೇಖರ ಸುರ್ವಣಗಿರಿಮಠ, ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರಜ್ವಲ್, ವೈದ್ಯರಾದ ದ್ಯಾಮಪ ಹುಲ್ಲೂರು, ಅಮ್ಜದ್ ಶರೀಪ್, ವಿಮಲಾ ಪಂಚಬಾವಿ ಸೇರಿದಂತೆ ಇತರರಿದ್ದರು.