

ರಾಯಚೂರು: ಪ್ರತಿಯೊಬ್ಬರು ಎಚ್‌ಐವಿ ಸೋಂಕಿತರ ಬಗ್ಗೆ ಕಾಳಜಿ ವಹಿಸಬೇಕು. ಎಚ್‌ಐವಿ ಸೋಂಕು ತಡೆಗಟ್ಟುವ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಎ.ಸಾತ್ವಿಕ್ ಹೇಳಿದರು.
ನಗರದ ಡಿಸಿ ಕಚೇರಿಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆ ಮತ್ತು ನಿಯಂತ್ರಣ ಘಟಕ, ರಿಮ್ಸ್ ಆಸ್ಪತ್ರೆ, ನವೋದಯ ಆಸ್ಪತ್ರೆ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸೋಮವಾರ ಮಾತನಾಡಿದರು.
ಸಮಾಜದಲ್ಲಿ ಎಚ್‌ಐವಿ ಸೋಂಕಿತರಿಗೆ ಎಲ್ಲರಂತೆ ಬದುಕುವ ಹಕ್ಕಿದೆ. ಸೋಂಕಿತರನ್ನು ಸಮಾನತೆಯಿಂದ ನೊಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಮುಂದಿನ ದಿನಗಳಲ್ಲಿ ಏಡ್ಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಇದೇ ವೇಳೆ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 3,700 ಸೋಂಕಿತರನ್ನು ಪತ್ತೆ ಹಚ್ಚಲಾಗಿದ್ದು, ಎಚ್‌ಐವಿ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗಿದೆ. ಇದೇ ರೀತಿ ಎಚ್‌ಐವಿ ಸೋಂಕು ತಡೆಗಟ್ಟಲು ಇಲಾಖೆಗಳು ಸಮನ್ವಯ ಸಾಧಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಡಿಸಿ ಶಿವಾನಂದ ಭಜಂತ್ರಿ, ಡಿಎಚ್‌ಒ ಡಾ.ಸುರೇಂದ್ರಬಾಬು, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ.ಶಾಕೀರ ಮೊಯಿನುದ್ದಿನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೆ.ಗಣೇಶ, ರಿಮ್ಸ್ ಪ್ರಾಚಾರ್ಯ ಡಾ.ರಾಹುಲ್ ಕೀರ್ತೆ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಪಾಟೀಲ್, ಎಸ್.ಕೆ.ಇ.ಎಸ್ ಪ್ಯಾರಾಮೆಡಿಕಲ್ ಕಾಲೇಜು ಪ್ರಾಚಾರ್ಯ ಬಾಬುರಾವ್ ಶೆಗುಣಸಿ ಸೇರಿದಂತೆ ಇತರರಿದ್ದರು.