ರಾಜ್ಯ ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ

04102021 Raichur State Level Shuttle Badminton Tournament
Published on

ಜಿಲ್ಲೆಯ ಕ್ರೀಡಾಪಟುಗಳಿಗೆ ಸೌಲಭ್ಯ| ನಗರ ಶಾಸಕ ಡಾ.ಶಿವರಾಜ ಪಾಟೀಲ್ ಭರವಸೆ


ರಾಯಚೂರು: ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದರ ಜತೆಗೆ ಕ್ರೀಡಾ ವಾತಾವರಣ ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಭರವಸೆ ನೀಡಿದರು.

ಸ್ಥಳೀಯ ಒಳಾಂಗಣ ಕ್ರೀಡಾಂಗಣದಲ್ಲಿ ರಾಯಚೂರು ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಿಂದ ಆಯೋಜಿಸಿರುವ ರಾಜ್ಯ ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಜಿಲ್ಲೆಯಲ್ಲಿ ಸಾಕಷ್ಟು ಕ್ರೀಡಾ ಪ್ರತಿಭೆಗಳಿವೆ. ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸೌಲಭ್ಯಗಳು ದೊರೆತಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದರು.

ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ತ್ರಿವಿಕ್ರಮ ಜೋಷಿ ಮಾತನಾಡಿ, ದುಸ್ಥಿತಿಯಲ್ಲಿದ್ದ ಒಳಾಂಗಣ ಕ್ರೀಡಾಂಗಣವನ್ನು ಪುನರ್ ನಿರ್ಮಾಣ ಮಾಡುವ ಕಾರ್ಯ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಶಾಸಕ ಡಾ.ಶಿವರಾಜ ಪಾಟೀಲ್‌ರ ಸಹಕಾರದಿಂದ ಉತ್ತಮ ಒಳಾಂಗಣ ಕ್ರೀಡಾಂಗಣ ನಿರ್ಮಾಣವಾಗಿದೆ. ಇದರಿಂದ ಕ್ರೀಡಾಪಟುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಆರ್‌ಡಿಎ ಅಧ್ಯಕ್ಷ ವೈ.ಗೋಪಾಲರೆಡ್ಡಿ, ಉದ್ಯಮಿಗಳಾದ ಇ.ಆಂಜನೇಯ, ಜಗದೀಶ ಗುಪ್ತಾ, ಡಾ.ಮಲ್ಲಿಕಾರ್ಜುನ, ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಭಿವೃದ್ಧಿ ವಿಭಾಗದ ಅಧ್ಯಕ್ಷ ವಿಶ್ವನಾಥ, ಜಿಲ್ಲಾಧ್ಯಕ್ಷ ಕಿರಣ ಬೆಲ್ಲಂ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net