ಸಮಸ್ಯಾತ್ಮಕ ಹಳ್ಳಿಗಳನ್ನು ಗುರುತಿಸಿ ನೀರೊದಗಿಸುವಂತೆ ಅಧಿಕಾರಿಗಳಿಗೆ ಜಿಪಂ ಸಿಇಒ ನೂರ್ ಜಹರಾ ಖಾನಂ ಸೂಚನೆ

12052022 raichur water meeting
Published on

ರಾಯಚೂರು: ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಹಳ್ಳಿಗಳನ್ನು ಗುರುತಿಸುವ ಮೂಲಕ ಜನರಿಗೆ ಸಮರ್ಪಕ ನೀರೊದಗಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಪಂ ಸಿಇಒ ನೂರ್ ಜಹರಾ ಖಾನಂ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಗುರುವಾರ ಕುಡಿಯುವ ನೀರಿನ ಸಮಸ್ಯೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕುಡಿಯುವ ನೀರು ಪೂರೈಕೆಗಾಗಿ ಜಿಲ್ಲೆಯ ಪ್ರತಿ ತಾಲೂಕಿಗೆ 15ರಿಂದ 20 ಲಕ್ಷ ರೂ.ಗಳನ್ನು ಕುಡಿಯುವ ನೀರಿಗಾಗಿ ಮೀಸಲಿಟ್ಟಿದ್ದು, ಅನುದಾನದ ಕೊರತೆಯಿಲ್ಲ ಎಂದರು.

ಕೆಲವು ಹಳ್ಳಿಗಳಲ್ಲಿ ಖಾಸಗಿ ಕೊಳವೆಬಾವಿ ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ. ಆದರೆ ಕೊಳವೆ ಬಾವಿಯಿಂದ ಪೈಪ್‌ಲೈನ್ ಹಾಕಲು ಬರುವುದಿಲ್ಲ. ಹೆಚ್ಚಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಮಾತ್ರ ಪೈಪ್‌ಲೈನ್ ಹಾಕಲು ಹಾಗೂ ಕೊಳವೆಬಾವಿ ಕೊರೆಸಲು ಅವಕಾಶವಿದೆ ಎಂದು ಹೇಳಿದರು.

ಪಿಡಿಒಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳ ಕುರಿತು ಮಾಹಿತಿ ನೀಡಿ, ಕೊಳವೆಬಾವಿ ಕೊರೆಸುವುದು ಸೇರಿ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಸಭೆ ಮಾಹಿತಿ ನೀಡಿದರು. ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಯೋಜನಾಧಿಕಾರಿ ಮಡೋಳಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net