

ರಾಯಚೂರು: ಕನ್ನಡ ರಾಜೊ್ಯೀೀತ್ಸವವನ್ನು ಅರ್ಥಪೂರ್ಣ ಹಾಗೂ ವೈಭವಯುತವಾಗಿ ಆಚರಣೆ ಮಾಡಲು ಎಲ್ಲ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಎಡಿಸಿ ಶಿವಾನಂದ ಭಜಂತ್ರಿ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಆಚರಣೆಯ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು.
ಕನ್ನಡ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ಹಾಗೂ ಕರ್ನಾಟಕ ಸಂಭ್ರಮ 50ರ ಅಂಗವಾಗಿ ಈ ಬಾರಿಯ ರಾಜ್ಯೋತ್ಸವವು ಅತ್ಯಂತ ಹೆಚ್ಚಿನ ಮಹತ್ವವನ್ನು ಹೊಂದಿದೆ. ಜಿಲ್ಲೆಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ತಿಳಿಸಿದರು.
ನ.1ರಂದು ಬೆಳಿಗ್ಗೆ 7.30ಕ್ಕೆ ನಗರದ ಕರ್ನಾಟಕ ಸಂಘದಲ್ಲಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನಂತರ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಲಿದೆ ಎಂದರು.
ರಾಜ್ಯೋತ್ಸವ ಆಚರಣೆಗೆ ವಿವಿಧ ಕಾರ್ಯಗಳಿಗಾಗಿ 9 ಸಮಿತಿಗಳನ್ನು ನೇಮಿಸಲಾಗಿದ್ದು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ಪ್ರಮಾನಂದಾ ಘೋಡ್ಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಎಡಿ ವೀರೇಶನಾಯಕ, ನಗರಸಭೆ ವ್ಯವಸ್ಥಾಪಕ ರಾಜು, ಪ್ರಮುಖರಾದ ಕೆ.ಶಾಂತಪ್ಪ, ವಿನೋದ ರೆಡ್ಡಿ, ರಾವತ್‌ರಾವ್ ಬರೂರ್, ಮುರುಳಿಧರ ಕುಲಕರ್ಣಿ, ರಾಜಶೇಖರ್ ಸೇರಿದಂತೆ ಇತರರಿದ್ದರು.