

ರಾಯಚೂರು: ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್(ಎಐಯುಟಿಯುಸಿ) ವತಿಯಿಂದ 4ನೇ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಅ.26 ಹಾಗೂ 27ರಂದು ಮೈಸೂರಿನಲ್ಲಿ ಸಮ್ಮೇಳನವನ್ನು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಸಂಘದ ಅಖಿಲ ಭಾರತ ಅಧ್ಯಕ್ಷ ಕೆ.ರಾಧಾಕೃಷ್ಣ ಉದ್ಘಾಟಿಸಲಿದ್ದಾರೆ. ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಶಂಕರ್‌ದಾಸ್ ಗುಪ್ತ ಮುಖ್ಯ ಭಾಷಣಕಾರರಾಗಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಎಂಟು ತಾಸು ಇದ್ದ ಕಾರ್ಮಿಕರ ದುಡಿಯುವ ಸಮಯವನ್ನು 12 ತಾಸಿನವರೆಗೆ ವಿಸ್ತರಣೆ ಮಾಡಲಾಗಿದೆ. ಕಾರ್ಮಿಕರಿಗೆ ಅತಿ ಕಡಿಮೆ ಕನಿಷ್ಠ ವೇತನವನ್ನು ನೀಡಲಾಗುತ್ತಿದೆ. ರಾಜ್ಯದಲ್ಲಿ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಹಾಗೂ ಪ್ರಸ್ತುತ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ. ಕಾರ್ಮಿಕರ ಸಮಸ್ಯೆಗಳ ಕುರಿತು ಸಮ್ಮೇಳನದಲ್ಲಿ ಚರ್ಚೆಗಳಾಗಲಿವೆ ಎಂದರು. ಈ ಸಂದರ್ಭದಲ್ಲಿ ಪ್ರಮುಖರಾದ ಅಣ್ಣಪ್ಪ, ಮಹೇಶ ಚೀಕಲಪರ್ವಿ, ಕರಿಲಿಂಗ ಸೇರಿದಂತೆ ಇತರರಿದ್ದರು.