

ಲಾಕ್‌ಡೌನ್‌ನಿಂದ ರೂ.25 ಕೋಟಿ ನಷ್ಟ
ರಾಯಚೂರು: ಲಾಕ್‌ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೋಮವಾರದಿಂದ ಸಾರಿಗೆ ಸಂಸ್ಥೆ ಬಸ್ ಸಂಚಾರ ಆರಂಭವಾಗಲಿದೆ.
ಈ ಕಾರಣದಿಂದಾಗಿ ಸಾರಿಗೆ ಇಲಾಖೆ ಸಿಬ್ಬಂದಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಬಸ್ ಮತ್ತು ಬಸ್ ನಿಲ್ದಾಣಗಳನ್ನು ಸ್ಯಾನಿಟೈಜೇಷನ್ ಮಾಡುತ್ತಿದೆ. ಸಿಬ್ಬಂದಿಯನ್ನು ಕರ್ತವ್ಯಕ್ಕೆ ಬರುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 363 ಮಾರ್ಗಗಳಲ್ಲಿ ಬಸ್ ಸಂಚಾರವಿದೆ. ಸರ್ಕಾರ ಬಸ್ ಸಂಚಾರಕ್ಕೆ ಅನುಮತಿ ನೀಡಿದೆ. ಆದರೆ, ಕೋವಿಡ್ ಸೋಂಕು ಹೆಚ್ಚಿರುವ ಜಿಲ್ಲೆಗಳಿಗೆ ಇಲ್ಲಿಂದ ಬಸ್ ಓಡಿಸಬೇಕೇ, ಬೇಡವೇ ಎನ್ನುವ ಬಗ್ಗೆ ಇನ್ನೂ ಮಾರ್ಗಸೂಚಿ ಬಿಡುಗಡೆ ಮಾಡಿಲ್ಲ. ಆದ್ದರಿಂದ ಎಷ್ಟು ಮಾರ್ಗಗಳಲ್ಲಿ ಬಸ್ ಸಂಚಾರ ಆರಂಭಿಸಬೇಕು ಎನ್ನುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ.
ಬೆಂಗಳೂರು, ಹುಬ್ಬಳ್ಳಿ ಸೇರಿ ಹಲವು ಮಹಾನಗರಗಳಿಗೆ ರಾತ್ರಿ ಸಂಚರಿಸುತ್ತಿದ್ದ ಬಸ್‌ಗಳನ್ನು ಯಾವ ಸಮಯಕ್ಕೆ ಸಂಚರಿಸುವಂತೆ ನೋಡಿಕೊಳ್ಳಬೇಕು ಎನ್ನುವ ಬಗ್ಗೆ ಕೆಲವು ಗೊಂದಲಗಳಿವೆ. ಈ ಕಾರಣ ಇಲಾಖೆ ಅಧಿಕಾರಿಗಳು ಎಲ್ಲ ಬಸ್‌ಗಳನ್ನು ಸಿದ್ಧವಾಗಿಟ್ಟುಕೊಂಡರೂ ಎಷ್ಟು ಬಸ್ ಓಡಿಸಬೇಕು ಎನ್ನುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ.
ನೌಕರರಿಗೆ ಲಸಿಕೆ ಕಡ್ಡಾಯ: ಬಸ್ ಸಂಚಾರ ಆರಂಭಿಸುತ್ತಿರುವುದರಿಂದ ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿರಬೇಕು ಮತ್ತು ಲಸಿಕೆ ಪಡೆದಿರಬೇಕು ಎನ್ನುವ ನಿಯ ಜಾರಿಗೊಳಿಸಲಾಗಿದೆ. ಈಗಾಗಲೇ ಹಲವು ಸಿಬ್ಬಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡ ಮತ್ತು ಲಸಿಕೆ ಪಡೆದುಕೊಂಡ ದಾಖಲೆಗಳನ್ನು ಇಲಾಖೆಗೆ ಸಲ್ಲಿಸಿದ್ದಾರೆ. ಸೋಮವಾರದಿಂದ ಆರ್‌ಟಿಪಿಆರ್‌ನಲ್ಲಿ ನೆಗೆಟಿವ್ ಬಂದಿರುವ ಹಾಗೂ ಲಸಿಕೆ ಪಡೆದವರಿಗೆ ಮಾತ್ರ ಕರ್ತವ್ಯಕ್ಕೆ ಹಾಜರಾಗಲು ಅನುಮತಿ ನೀಡಲಾಗುತ್ತಿದೆ. ಕೋವಿಡ್ ಪರೀಕ್ಷೆಗೆ ಒಳಗಾದ ಕೆಲವರ ವರದಿ ಬರಬೇಕಾಗಿದೆ.