

ರಾಯಚೂರು: ಸರ್ಕಾರದಿಂದ ಜನರಿಗೆ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕೆಂದು ಸಂಸದ ಜಿ.ಕುಮಾರ ನಾಯಕ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಭೆಯ ಅಧ್ಯಕ್ಷತೆ ವಹಿಸಿ ಶುಕ್ರವಾರ ಮಾತನಾಡಿದರು.
ಜಿಲ್ಲೆಯಲ್ಲಿರುವ ರಸ್ತೆಗಳ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಬೇಕು. ಇತ್ತೀಚೆಗೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಇದಕ್ಕೆ ರಸ್ತೆ ಹದಗೆಟ್ಟಿರುವುದು ಹಾಗೂ ಅಧಿಕಾರಿಗಳ ನಿರ್ಲಕ್ಷೃವೇ ಮುಖ್ಯ ಕಾರಣವಾಗಿದೆ. ಗುಣಮಟ್ಟದ ರಸ್ತೆ ನಿರ್ಮಾಣವಾಗದೇ ಇದ್ದಲ್ಲಿ ಸಂಭವಿಸುವ ಅಪಘಾತಗಳಿಗೆ ಅಧಿಕಾರಿಗಳನ್ನೇ ನೇರ ಹೋಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಸಿದರು.
ಕೇವಲ ಅಪಘಾತಗಳಾದಾಗ ಹಾಗೂ ಪೊಲೀಸ್ ಇಲಾಖೆಯಿಂದ ನಿರ್ದೇಶನ ಬಂದ ನಂತರ ರಸ್ತೆ ದುರಸ್ತಿ ಮಾಡುವುದಲ್ಲ ಮುಂಜಾಗೃತಾ ಕ್ರಮವಾಗಿ ರಸ್ತೆ ದುರಸ್ತಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಕೇಂದ್ರ ಪುರಸ್ಕೃತ ಯೋಜನೆಗಳನ್ನು ಜಿಲ್ಲೆಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ರಾಷ್ಟ್ರೀಯ ಹೆದ್ದಾರಿ 167 ರಲ್ಲಿ ಬರುವ ಕೃಷ್ಣಾನದಿ ಸೇತುವೆ ಕಾಮಗಾರಿ ಕುರಿತು ಅಧಿಕಾರಿಗಳಲ್ಲಿ ಸರಿಯಾದ ಮಾಹಿತಿಯೇ ಇಲ್ಲ. ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಕಾಮಗಾರಿ ಪೂರ್ಣಗೊಳಿಸುವಲ್ಲಿ ತೋರುತ್ತಿರುವ ನಿರ್ಲಕ್ಷೃ ಸರಿಯಲ್ಲ ಎಂದು ಕಿಡಿ ಕಾರಿದರು.
ಜನರು ಸುರಕ್ಷಿತವಾಗಿ ಸಂಚರಿಸಲು ತ್ವರಿತವಾಗಿ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಸಬೇಕು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡುತ್ತಿರುವರೇ ಎಂದು ನಿರಂತರವಾಗಿ ಪರಿಶೀಲಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿರುತ್ತದೆ ಎಂದು ತಿಳಿಸಿದರು.
ಫಸಲ್ ಭಿಮಾ ಯೋಜನೆಯಡಿ ರೈತರ ನೋಂದಣಿ ಅತ್ಯಂತ ಮುಖ್ಯವಾಗಿದ್ದು, ಕೃಷಿ ಇಲಾಖೆಯಿಂದ ಬೆಳೆ ವಿಮೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ. ರೈತರಿಗೆ ಯಾವ ಸಂದರ್ಭದಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂಬ ಮಾಹಿತಿಯನ್ನು ನೀಡಲು ತರಬೇತಿ ಕಾರ್ಯಕ್ರಮಗಳನ್ನು ಹೋಬಳಿ ಮಟ್ಟದಲ್ಲಿ ಹಮ್ಮಿಕೊಳ್ಳಲು ಇಲಾಖೆ ಮುಂದಾಗಬೇಕು ಎಂದರು.
ವಿಮಾ ಸೌಲಭ್ಯದಡಿ ರೈತರಿಗೆ ಸಮರ್ಪಕವಾಗಿ ಬೆಳೆ ವಿಮೆಯ ಹಣ ಸಿಕ್ಕರೇ ಹೆಚ್ಚಿನ ರೈತರು ವಿಮೆಗೆ ಅರ್ಜಿ ಸಲ್ಲಿಸುತ್ತಾರೆ. ಜತೆಗೆ ರೈತರ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಿ ಬೆಳೆ ವಿಮೆ ಮಾಡಿಸಲಾಗುತ್ತಿರುವ ಬಗ್ಗೆಯೂ ದೂರುಗಳು ಕೇಳಿ ಬರುತ್ತಿದ್ದು, ಈ ನಿಟ್ಟಿನಲ್ಲಿಯೂ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಸೂಚಿಸಿದರು.
ಗಿಣಗೇರಾ-ರಾಯಚೂರು ರೈಲ್ವೆ ಯೋಜನೆಯಡಿ ಬರುವ ಸಿಂಧನೂರು- ರಾಯಚೂರು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆದರೆ ಸ್ವಾಧೀನಪಡಿಸಿಕೊಂಡ ರೈತರ ಜಮೀನಿನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕಲ್ಲುಗಳನ್ನು ಹಾಕಲಾಗಿದೆ ಇದರಿಂದ ಹೆಚ್ಚುವರಿ ಜಾಗವನ್ನು ಬಳಸಿಕೊಳ್ಳಲಾಗಿದೆ ಎಂದು ರೈತರಿಂದ ದೂರುಗಳು ಕೇಳಿಬರುತ್ತಿವೆ. ಸಂಬಂಧಪಟ್ಟ ಭೂಸ್ವಾಧೀನ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಸಬೇಕು ಮತ್ತು ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಇದೇ ವೇಳೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಗ್ರಾಮಿಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಜಿಲ್ಲೆಯಲ್ಲಿ ಬಾಕಿ ಇರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅನ್ಯ ರಾಜ್ಯಗಳಲ್ಲಿ ಆಗುತ್ತಿರುವ ಕುಡಿಯುವ ನೀರಿನ ಯೋಜನೆಗಳ ಸಾಧನೆ ರಾಜ್ಯದಲ್ಲಿ ಏಕೆ ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಸಂದರ್ಭದಲ್ಲಿ ಅಗೆಯಲಾದ ಸಿಸಿ ರಸ್ತೆಯನ್ನು ಕಾಮಗಾರಿ ಪಡೆದಿರುವ ಗುತ್ತಿಗೆದಾರನೇ ಸರಿಪಡಿಸಿಕೊಡಬೇಕೆಂಬ ನಿಯಮವಿದೆ. ಆದರೆ ಹಲವು ಕಡೆಗಳಲ್ಲಿ ಸಿಸಿ ರಸ್ತೆಯನ್ನು ತೋಡಿ ಹಾಗೆಯೇ ಬಿಡಲಾಗಿದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಕುಡಿಯುವ ನೀರು ಸರಬರಾಜಿಗೆ ಡಿಸಿ ಮತ್ತು ಸಿಇಒ, ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯ ಜನರಿಗೆ ಕುಡಿಯುವ ನೀರು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಡಿಸಿ ಕೆ.ನಿತೀಶ, ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ, ಎಸ್ಪಿ ಎಂ.ಪುಟ್ಟಮಾದಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
ರಸ್ತೆ ಅಪಘಾತಗಳಿಗೆ ಹದಗೆಟ್ಟ ರಸ್ತೆಗಳೇ ಕಾರಣವಾದ್ದರಿಂದ ಗುಣಮಟ್ಟದ ರಸ್ತೆಗಳನ್ನು ಮಾಡದ ಹಾಗೂ ತ್ವರಿತಗತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸದ ಕಾರಣ, ಅಪಘಾತವಾದಾಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲಿಸುವಂತೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಎಸ್ಪಿ ಪುಟ್ಟಮಾದಯ್ಯ ಅವರಿಗೆ ತಿಳಿಸಿದರು.