ಹೈಕೋರ್ಟ್ ಮೊರೆ ಹೋದ ಶರಣಗೌಡ ಬಯ್ಯಾಪುರ

28032022 Sharanagowda Bayyapur
Published on


ರಾಯಚೂರು: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾ.30ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ನೀಡದಿರುವುದರಿಂದ ಚುನಾವಣೆಗೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಕಲಬುರಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.ಮತದಾನಕ್ಕೆ ಅವಕಾಶ ನೀಡುವಂತೆ ಚುನಾವಣಾಧಿಕಾರಿಗೆ ಶರಣಗೌಡ ಬಯ್ಯಪುರ ಅರ್ಜಿ ಸಲ್ಲಿಸಿದ್ದರು. ಮತ ಚಲಾಯಿಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮಾ.29ರಂದು ಈ ಕುರಿತ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದು, ರಾಯಚೂರು ನಗರ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ ನಂತರ ನಗರಸಭೆ ಅಧ್ಯಕ್ಷ ಆಯ್ಕೆಗೆ ಚುನಾವಣೆ ದಿನಾಂಕ ನಿಗದಿ ಮಾಡಲಾಗಿದೆ. ಜಿಲ್ಲಾಡಳಿತ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ವಿಳಂಬ ಮಾಡಿದ್ದರಿಂದ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶ ದೊರೆಯದಂತಾಗಿದೆ ಎಂದು ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾಧಿಕಾರಿ, ಚುನಾವಣಾಧಿಕಾರಿ, ಪೌರಾಯುಕ್ತರನ್ನು ಪ್ರತಿವಾದಿಗಳನ್ನಾಗಿಸಿ ಮತದಾನಕ್ಕೆ ಅವಕಾಶ ನೀಡಿದ ನಂತರ ಚುನಾವಣೆ ನಡೆಸುವಂತೆ ಅರ್ಜಿಯಲ್ಲಿ ಕೋರಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರು ಹೈಕೋರ್ಟ್‌ಗೆ ಕೆವಿಯೆಟ್ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net