

ರಾಯಚೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ವಿಶ್ವ ರೈತರ ದಿನಾಚರಣೆ ಅಂಗವಾಗಿ ರೈತರ ಹಬ್ಬ ಹಾಗೂ ರಾಜ್ಯ ಮಟ್ಟದ ರೈತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಶಿವಾರ್ಜುನ ನಾಯಕ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಡಿ.23ರ ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಮುಕ್ತ ವಿಶ್ವವಿದ್ಯಾಲಯ ಶತಮಾನೋತ್ಸವ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಮಾವೇಶದಲ್ಲಿ ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಕಾನೂನು ಜಾರಿಗೊಳಿಸುವ, ಕೃಷಿ ಸಾಲಮನ್ನ, ಕೃಷಿ ಉಪಕರಣಗಳ ಮೇಲಿನ ಜಿಎಸ್‌ಟಿ ರದ್ದತಿ, ಫಸಲ್ ಭಿಮಾ ಯೋಜನೆಯ ವಿಮೆ ಹಣ ಸಮರ್ಪಕವಾಗಿ ಸಿಗುವಂತಾಗಲು, ರಾಜ್ಯದಲ್ಲಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಪತ್ರ ವಿತರಣೆ, ಕೃಷಿ ಪಂಪ್ ಸೆಟ್‌ಗಳಿಗೆ ಹತ್ತು ಗಂಟೆ ವಿದ್ಯುತ್ ಪೂರೈಕೆ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಚರ್ಚೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಉದ್ಘಾಟಿಸಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ 10 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವ ನಿರೀಕ್ಷೆಯಿದೆ. ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಈ ಸದಂರ್ಭದಲ್ಲಿ ಪ್ರಮುಖರಾದ ಬಿ.ಸತ್ಯರೆಡ್ಡಿ, ಬಸವರಾಜ, ಭೀಮರಾಯ, ಸಂಗಮೇಶ, ಹನುಮೇಶ ಸೇರಿದಂತೆ ಇತರರಿದ್ದರು.