

ರಾಯಚೂರು: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ನಗರದ ಪ್ರಮುಖ ಬೀದಿಗಳಲ್ಲಿ ಜಿಲ್ಲಾ ಕಾಂಗ್ರೆಸ್ ಬುಧವಾರ ಸೈಕಲ್ ಜಾಥಾದೊಂದಿಗೆ ಪ್ರತಿಭಟನೆ ನಡೆಸಿಯಿತು.
ನಗರದ ಆರ್‌ಟಿಒ ವೃತ್ತದಿಂದ ಆರಂಭವಾದ ಸೈಕಲ್ ಜಾಥಾ ಬಿಆರ್‌ಬಿ ವೃತ್ತ, ನೇತಾಜಿ ವೃತ್ತ, ಪಟೇಲ್ ವೃತ್ತ, ಚಂದ್ರಮೌಳೇಶ್ವರ ವೃತ್ತ, ಗಂಜ್ ವೃತ್ತದ ಮಾರ್ಗವಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಂದು ತಲುಪಿತು. ಜಾಥಾದಲ್ಲಿ ಕಾರ್ಯಕರ್ತರು ತೈಲ ಬೆಲೆ ಹೆಚ್ಚಳ ಖಂಡಿಸಿ 100 ನಾಟೌಟ್ ಫಲಕಗಳನ್ನು ಪ್ರದರ್ಶಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿ ವಿರುದ್ಧ ಘೋಷಣೆಗಳನ್ನು ಕೂಗಿ, ಕೂಡಲೇ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಮೂಲಕ ದರ ಹೆಚ್ಚಳಕ್ಕೆ ಕಾರಣವಾಗಿವೆ. ಕರೊನಾದಿಂದ ಜನರು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳ ಮಾಡಿ ಜನರಿಗೆ ಆರ್ಥಿಕ ಹೊರೆ ಉಂಟು ಮಾಡುತ್ತಿವೆ. ತೈಲ ಬೆಲೆ ಹೆಚ್ಚಳದಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುವಂತಾಗಿ ಜನರು ಜೀವನ ನಡೆಸಲು ಸಂಕಷ್ಟ ಎದುರಿಸುವಂತಾಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ನಗರಸಭೆ ಅಧ್ಯಕ್ಷ ಇ.ವಿನಯಕುಮಾರ, ಸದಸ್ಯರಾದ ಜಯಣ್ಣ, ಬಸವರಾಜ ಪಾಟೀಲ್ ದರೂರ, ಬಿ.ರಮೇಶ, ಮುಖಂಡರಾದ ರವಿ ಬೋಸರಾಜು, ಕೆ.ಶಾಂತಪ್ಪ, ಜಿ.ಶಿವಮೂರ್ತಿ, ಅಸ್ಲಂಪಾಷಾ, ಅಮರೇಗೌಡ ಹಂಚಿನಾಳ, ನಿರ್ಮಲಾ ಬೆಣ್ಣೆ, ವಂದನಾ ಹಾಗೂ ಇತರರಿದ್ದರು.