

ರಾಯಚೂರು : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗಳಿಗೆ ತಲಾ 2 ಸಾವಿರ ರೂ. ಜಮಾ ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರದಿಂದ 956 ಕೋಟಿ ರೂ. ಬಿಡುಗಡೆಯಾಗಿದೆ. ರಾಜ್ಯ ಸರ್ಕಾರ 600 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದು ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಸ್ಥಳೀಯ ಕೃಷಿ ವಿಜ್ಞಾನಗಳ ವಿವಿ ಸಭಾಂಗಣದಲ್ಲಿ ಬುಧವಾರ ಜರುಗಿದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರೊನಾ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆ ಹಾಗೂ ಕೃಷಿ ಉತ್ಪನ್ನಗಳ ಮಾರಾಟ, ಸಾಗಣೆಗೆ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದರು.
ಶಾಸಕ ವೆಂಕಟರಾವ ನಾಡಗೌಡ ಜಿಲ್ಲೆಯಲ್ಲಿ ಜೋಳ ಖರೀದಿ ಕೇಂದ್ರ ಆರಂಭಿಸಲಾಗಿಲ್ಲ ಎನ್ನುವ ದೂರು ಹೇಳಿದಾಗ, ಸಚಿವರು ಖರೀದಿ ಕೇಂದ್ರ ತೆರೆಯಲು ಈಗಾಗಲೇ ಸೂಚನೆ ನೀಡಲಾಗಿದೆ. ಅಧಿಕಾರಿಗಳಿಗೆ ಆದೇಶ ತಲುಪಿಲ್ಲದಿದ್ದಲ್ಲಿ ತಕ್ಷಣ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಮಾತನಾಡಿ, ಪೊಲೀಸರು ಹತ್ತಿ ಬಿಡಿಸಲು ಹೋಗುವ ಕಾರ್ಮಿಕರಿಗೆ ತೊಂದರೆ ಕೊಡುತ್ತಿದ್ದಾರೆ. ಭತ್ತ ಕಟಾವು ಯಂತ್ರಗಳನ್ನು ಗಡಿಯಲ್ಲಿ ಬಿಡಲು ಪೊಲೀಸರು ಹಣ ಕೇಳುತ್ತಿದ್ದಾರೆ. ರೈತರಿಗೆ ನೀಡಲಾಗುವ ಸಬ್ಸಿಡಿಗಳು ಮಧ್ಯವರ್ತಿಗಳ ಪಾಲಾಗುತ್ತಿದ್ದು, ಅಗತ್ಯ ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.
ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಡಾ.ಶಿವರಾಜ ಪಾಟೀಲ್, ಕೆ.ಶಿವನಗೌಡ ನಾಯಕ, ಬಸನಗೌಡ ದದ್ದಲ್, ಡಿ.ಎಸ್.ಹೂಲಗೇರಿ, ವೆಂಕಟರಾವ್ ನಾಡಗೌಡ, ರಾಜಾ ವೆಂಕಟಪ್ಪ ನಾಯಕ ಸೇರಿ ಇತರರಿದ್ದರು.