ವಿಜ್ಞಾನ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಿ: ವಿಜ್ಞಾನಿ ರವಿಕುಮಾರ ಸಲಹೆ

science center
Published on

ರಾಯಚೂರು: ಪ್ರಸ್ತುತ ದಿನಮಾನಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ವಿದ್ಯಾರ್ಥಿಗಳು ವಿಜ್ಞಾನದಲ್ಲಿ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ(ಕೆಸ್ಟೆಪ್ಸ್)ಯ ಹಿರಿಯ ವಿಜ್ಞಾನಿ ಡಾ.ರವಿಕುಮಾರ ಹೇಳಿದರು.

ನಗರದ ವಿಜ್ಞಾನ ಕೇಂದ್ರದಲ್ಲಿ ಕೆಸ್ಟೆಪ್ಸ್, ಶಾಲಾ ಶಿಕ್ಷಣ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಜವಹಾರ್‌ಲಾಲ್ ನೆಹರು ತಾರಾಲಯ ಹಾಗೂ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕಲಬುರಗಿ ವಿಭಾಗ ಮಟ್ಟದ ವಿಜ್ಞಾನ ರಸಪ್ರೆಶ್ನೆ ಕಾರ್ಯಕ್ರಮವನ್ನುದ್ದೇಶಿಸಿ ಬುಧವಾರ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆಯನ್ನು ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ತನ್ನ ಅಂಗ ಸಂಸ್ಥೆಗಳ ಮೂಲಕ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ವಿದ್ಯಾರ್ಥಿಗಳು ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ಭವಿಷ್ಯದಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಮುಂದಾಗಬೇಕು ಎಂದರು.

ಇದೇ ವೇಳೆ ಬೆಂಗಳೂರಿನ ಜವಾಹರ್‌ಲಾಲ್ ನೆಹರು ತಾರಾಲಯದ ಹಿರಿಯ ವೈಜ್ಞಾನಿಕ ಅಧಿಕಾರಿ ಎಂ.ವೈ.ಆನಂದ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಇಂತಹ ರಾಜ್ಯ ಮಟ್ಟದ ವಿಜ್ಞಾನ ಸ್ಪರ್ಧೆಯನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡುವುದರ ಮೂಲಕ ರಾಜ್ಯದ ಎಲ್ಲ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಈ ಸ್ಪರ್ಧೆಯನ್ನು ತಲುಪಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯುರೇಟರ್ ಎಸ್.ಅಜೀತಕುಮಾರ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net