

ರಾಯಚೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಾಡೋಜ ಡಾ.ಶಾಂತರಸ ಹೆಂಬೆರಾಳು ಜನ್ಮ ಶತಮಾನೋತ್ಸವ ಸಮಾರಂಭವನ್ನು ಡೊ.12ರ ಬೆಳಿಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ಸದಸ್ಯ ಸಂಚಾಲಕ ಡಾ.ಸಿ.ಬಿ.ಚಿಲ್ಕರಾಗಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಾಹಿತಿ ಪ್ರೊ.ಅಲ್ಲಮಪ್ರಭು ಬೆಟ್ಟದೂರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ವಹಿಸಿಕೊಳ್ಳಲಿದ್ದಾರೆ. ಶಾಂತರಸರ ಬದುಕು ಬರಹ, ಶಾಂತರಸರ ಕಥೆ ಕಾದಂಬರಿ, ಶಾಂತರಸರ ಕಾವ್ಯ, ಗಜಲುಗಳು ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಗೋಷ್ಠಿಗಳು ನಡೆಯಲಿದ್ದು, ಗಜಲ್ ಕಾವ್ಯ ವಾಚನ ಕಾರ್ಯಕ್ರಮವೂ ನಡೆಯಲಿದೆ ಎಂದರು.
ಹಿರಿಯ ಸಾಹಿತಿ ರಾಮಣ್ಣ ಹವಳೆ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯಭಗತರಾಜ ನಿಜಾಮಕಾರಿ, ಚುಕ್ಕಿ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಚುಕ್ಕಿ ಸೂಗಪ್ಪ ಸಾಹು, ಶಾಂತರಸರ ಪುತ್ರ ಎಚ್.ಎಸ್.ಬಸವಪ್ರಭು ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ತಾಯಪ್ಪ ಹೊಸೂರು, ಗೌರವ ಕೋಶಾಧ್ಯಕ್ಷ ಜಿ.ಸುರೇಶ, ತಾಲೂಕಾಧ್ಯಕ್ಷ ವೆಂಕಟೇಶ ಬೇವಿನಬೆಂಚಿ, ಸದಸ್ಯೆ ಪ್ರತಿಭಾ ಗೋನಾಳ ಸೇರಿದಂತೆ ಇತರರಿದ್ದರು.