

ರಾಯಚೂರು: ಸಿಂಧನೂರಿನಲ್ಲಿ ನಡೆಯುವ ದಸರಾ ಉತ್ಸವ, ರಾಯಚೂರು ನಗರದಲ್ಲಿ ನಡೆಯುವ ಗೋಕಾಕ್ ಚಳುವಳಿಯ ಹಿನ್ನೋಟ, ಮುನ್ನೋಟ ಸಮಾವೇಶ ಹಾಗೂ ಮಾನವಿ ವಿವಿಧ ಕಾಮಗಾರಿಗಳ ಭೂಮಿಪೂಜೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಡಿಸಿ ಕೆ.ನಿತೀಶ್ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಅ.4ರಂದು ಸಿಂಧನೂರಿನಲ್ಲಿ ಹಮ್ಮಿಕೊಂಡಿರುವ ದಸರಾ ಉತ್ಸವವನ್ನು ಮೈಸೂರು ದಸರಾ ಮಾದರಿಯಲ್ಲಿ ಆಚರಿಸಲಾಗುತ್ತದೆ. ದಸರಾ ಉತ್ಸವ ಚಾಲನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದರು.
ಯುವ ದಸರಾ, ರೈತ ದಸರಾ, ಮಹಿಳಾ ದಸರಾ ಸೇರಿದಂತೆ ಹಲವು ವಿಷಯಾಧರಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಿಂಧನೂರಿನ ದಸರಾ ಉತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ. ಉತ್ಸವಕ್ಕೆ 1.5 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಿದರು.
ಅ.5ರಂದು ರಾಯಚೂರು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಗೋಕಾಕ್ ಚಳುವಳಿಯ ಹಿನ್ನೋಟ, ಮುನ್ನೋಟ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಮಾವೇಶವನ್ನು ಸಿಎಂ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಸಮಾವೇಶವನ್ನು 1 ಕೋಟಿ ವೆಚ್ಚದಲ್ಲಿ ಮಾಡಲಾಗುತ್ತಿದ್ದು, ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತದಿಂದ 13 ಕಾರ್ಯ ಸಮಿತಿಗಳನ್ನು ರಚಿಸಲಾಗಿದೆ. ಸಮಾವೇಶಕ್ಕೆ 15 ಸಾವಿರ ಜನರು ಆಗಮಿಸುವ ನಿರೀಕ್ಷೆಯಿದೆ. ಆಗಮಿಸುವ ಎಲ್ಲರಿಗೂ ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿ.ಪಂ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ, ಎಸ್ಪಿ ಎಂ.ಪುಟ್ಟಮಾದಯ್ಯ ಸೇರಿದಂತೆ ಇತರರಿದ್ದರು.
ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಒಟ್ಟು 44 ವಲಯದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. 3 ಎಎಸ್‌ಪಿ, 13 ಡಿಎಸ್‌ಪಿ, 55 ಸಿಪಿಐ, 140 ಸಬ್ ಇನ್ಸ್‌ಪೆಕ್ಟರ್, 340 ಎಎಸ್‌ಐ, 1700 ಕಾನ್ಸ್‌ಟೇಬಲ್, 200 ಮಹಿಳಾ ಪೊಲೀಸರು, 13 ಡಿಎಆರ್ ಹಾಗೂ 5 ಕೆಎಸ್‌ಆರ್‌ಪಿ ತುಕಡಿಗಳನ್ನು ಬಸಂದೋಬಸ್ತ್‌ಗಾಗಿ ನಿಯೋಜಿಸಲಾಗಿದೆ ಎಂದು ಎಸ್ಪಿ ಎಂ.ಪುಟ್ಟಮಾದಯ್ಯ ತಿಳಿಸಿದರು.