

ರಾಯಚೂರು: ಜಿಲ್ಲೆಯ ಬೀದಿ ಬದಿ ವ್ಯಾಪಾರಿಗಳ ಹಲವು ಸಮಸ್ಯೆಗಳ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಕೆಪಿಸಿಸಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಚನ್ನವೀರ ಕಣಗಿರಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ನಗರಸಭೆ ಹಾಗೂ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳು ಜಿಲ್ಲೆಯಲ್ಲಿರುವ ಬೀದಿ ವ್ಯಾಪಾರಿಗಳನ್ನು ಗುರುತಿಸಿ ಸರ್ಕಾರದ ಸೌಲಭ್ಯಗಳನ್ನು ನೀಡುವ ಕುರಿತು ಗಮನಹರಿಸಬೇಕಾಗಿದೆ. ವಿಭಾಗದ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ಮಳಿಗೆಗಳನ್ನು ನಿರ್ಮಿಸಿಕೊಡುವ ಬೇಡಿಕೆಯನ್ನು ಸರ್ಕಾರದ ಮುಂದಿಡಲಾಗುವುದು ಎಂದು ತಿಳಿಸಿದರು.
ನಗರದ ರೈಲ್ವೆ ಸ್ಟೇಷನ್ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದವರಿಗೆ ಯಾವುದೇ ಪರ್ಯಾಯ ವ್ಯವಸ್ಥೆಯನ್ನು ಮಾಡದೇ ಏಕಾಏಕಿ ತೆರವುಗೊಳಿಸಲಾಗಿದೆ. ಇದರಿಂದ ವ್ಯಾಪಾರಿಗಳ ಬದುಕು ಅಸ್ಥಿರವಾಗಿದೆ ಎಂದರು.
ಸರ್ಕಾರದ ಯೋಜನೆಗಳ ಬಗ್ಗೆ ಹಾಗೂ ವ್ಯಾಪಾರ ಪರವಾನಿಗೆ ಕೊಡಿಸುವ ಕಾರ್ಯವನ್ನು ಹಾಗೂ ಸಂಘಟಿಸುವ ಕಾರ್ಯವನ್ನು ಮುಂದಿನ ದಿನಗಳಲ್ಲಿ ಜಿಲ್ಲಾ ಘಟಕದಿಂದ ಮಾಡಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಯೇಸುಮಿತ್ರ, ಸೈಯದ್ ಮೋನು, ನಂದಕಿಶೋರ್, ಗೋಪಿನಾಥ ಸೇರಿದಂತೆ ಇತರರಿದ್ದರು.