ಹಕ್ಕುಪತ್ರ ನೋಂದಣಿ ಪ್ರಕ್ರಿಯೆ ಚುರುಕುಗೊಳಿಸಿ: ಜನಾರ್ಧನ

IMG-20241209-WA0019
Published on

ರಾಯಚೂರು: ರಾಜ್ಯದಲ್ಲಿ ಸ್ಲಂ ನಿವಾಸಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಹಾಗೂ ಸ್ಲಂ ನಿವಾಸಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿ.13ರಂದು ಬೆಳಗಾವಿಯ ಸುವರ್ಣ ಸೌಧದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಯ ಅಧ್ಯಕ್ಷ ಜನಾರ್ಧನ ಹಳ್ಳಿಬೆಂಚಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಸ್ಲಂ ಜನರಿಗೆ ಹಕ್ಕು ಪತ್ರ, ನೋಂದಣಿ, ಇ-ಖಾತೆ ಪ್ರಕ್ರಿಯೆಯನ್ನು ಕೂಡಲೇ ಚುರುಕುಗೊಳಿಸಬೇಕು, ಖಾಸಗಿ ಸ್ಲಂಗಳ ಘೋಷಣೆಗೆ ತೊಡಕಾಗಿರುವ ವಸತಿ ಇಲಾಖೆ ಸುತ್ತೋಲೆಗಳನ್ನು ತಕ್ಷಣವೇ ಹಿಂಪಡೆಯಬೇಕು. 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಕೊಳಚೆ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ 500 ಕೋಟಿ ಅನುದಾನವನ್ನು ಮೀಸಲಿಡಬೇಕು ಎಂದರು.

ರಾಜ್ಯದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಸ್ಲಂ ನಿವಾಸಿಗಳಿಗೆ ನಿರ್ಮಿಸುತ್ತಿರುವ ವಸತಿ ಸಮುಚ್ಛಯಗಳನ್ನು ತುರ್ತಾಗಿ ಪೂರ್ಣಗೊಳಿಸಬೇಕು. ಈ ಎಲ್ಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ನೂರ್‌ಜಾನ್, ಸಂಘಟನಾ ಕಾರ್ಯದರ್ಶಿ ಬಸವರಾಜ, ಪ್ರಮುಖರಾದ ಜಂಬಣ್ಣ, ಪವನ್, ಪ್ರವೀಣ, ಶರಣಬಸವ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net