ಯೋಜನೆಗಳ ಪ್ರಗತಿಗೆ ಅಧಿಕಾರಿಗಳ ಪಾತ್ರ ಅತಿಮುಖ್ಯ: ಡಿಸಿ ನಿತೀಶ್

oplus_0
oplus_0
Published on

ರಾಯಚೂರು: ಜಿಲ್ಲೆಯ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಗಳ ಪ್ರಗತಿ ಸಾಧಿಸಲು ಸಂಬಧಪಟ್ಟ ಅಧಿಕಾರಿಗಳ ಇಚ್ಛಾಶಕ್ತಿ ಮತ್ತು ಜವಾಬ್ದಾರಿ ಅತ್ಯಂತ ಮುಖ್ಯವಾದದ್ದು ಎಂದು ಡಿಸಿ ನಿತೀಶ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು.

ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಾಗಿದೆ. ಯಾವುದೇ ಯೋಜನೆಯನ್ನು ಅನುಷ್ಠಾನಗೊಳಿಸಲು ಇಚ್ಛಾಶಕ್ತಿ ಅತ್ಯವಶ್ಯಕವಾಗಿದ್ದು, ಇಚ್ಚಾಶಕ್ತಿಯಿಂದ ಕಾರ್ಯನಿರ್ವಹಿಸಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಲಾಖೆಯ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇಲಾಖೆಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಾಗೂ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ಉತ್ತಮ ಫಲಿತಾಂಶ ದೊರೆಯುತ್ತದೆ ಆ ನಿಟ್ಟಿನಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 2856 ಅಂಗನವಾಡಿ ಕೇಂದ್ರಗಳು, 32 ಮಿನಿ ಅಂಗನವಾಡಿ ಕೇಂದ್ರಗಳಿವೆ. ಇವುಗಳಲ್ಲಿ 2024-25ನೇ ಸಾಲಿನ ಜುಲೈ ಅಂತ್ಯಕ್ಕೆ 2,24,630 ಫಲಾನುಭವಿಗಳು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಕೈಗಾರಿಕಾರಿ ಅಧಿಕಾರಿ ಬಸವರಾಜ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುದುಕಪ್ಪ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net