ಸಿರವಾರ: ಹೊಕ್ರಾಣಿ ಗ್ರಾಮದ ಯುವತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿದ್ದರೂ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಧರ್ಮಸಿಂಗ್ ಹೇಳಿದರು.
ಹೊಕ್ರಾಣಿಯಲ್ಲಿ ಮೃತ ಯುವತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಸೋಮವಾರ ಮಾತನಾಡಿದರು. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆದಿದೆ. ಕುಟುಂಬಸ್ಥರು ಆತಂಕಪಡುವ ಅಗತ್ಯವಿಲ್ಲ. ಕುಟುಂಬಕ್ಕೆ ಅಗತ್ಯ ನೆರವು ಹಾಗೂ ಭದ್ರತೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ವ್ಯಾಪಕ ಸಭೆಗಳನ್ನು ನಡೆಸಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಅಗತ್ಯವಿರುವ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಹಾಗೂ ಮೂಲಸೌಕರ್ಯ ಒದಗಿಸುವಂತೆ ಗೃಹಸಚಿವರನ್ನು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಶೇಷವಾಗಿ ರಾಯಚೂರು ಜಿಲ್ಲೆಯಲ್ಲಿ ಶೌಚಗೃಹ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ದೌರ್ಜನ್ಯ ವಿರೋಧಿ ಹೋರಾಟ ಸಮಿತಿ ಕೈಗೊಂಡಿರುವ ಅನಿದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವರಿಗೆ ಲಿಂಗಸುಗೂರು ತಾಲೂಕಿನ ರಾಣೆಮ್ಮ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಭೂಮಾನಂದ ಕೊಲೆ ಪ್ರಕರಣಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ದಲಿತ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.