ಮಸ್ಕಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಮರು ಪರೀಕ್ಷೆ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ತ್ತಿನ ತಾಲೂಕು ಪದಾಧಿಕಾರಿಗಳು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮಂಜುನಾಥ ಭೋಗಾವತಿಗೆ ಮನವಿ ಸಲ್ಲಿಸಿದರು.
ಪರಿಷತ್ತಿನ ತಾಲೂಕು ಅಧ್ಯಕ್ಷ ಮೌನೇಶ ತುಗ್ಗಲದಿನ್ನಿ ಮಾತನಾಡಿ, ನೀಟ್ ಪರೀಕ್ಷಾ ಅಕ್ರಮ ಕೇವಲ ಪರೀಕ್ಷೆಯ ವೈಫಲ್ಯವಲ್ಲ. ಬದಲಾಗಿ ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಪರೀಕ್ಷಾ ಅಕ್ರಮದ ಬಗ್ಗೆ ಸಂಪೂರ್ಣವಾಗಿ ತನಿಖೆಯಾಗಬೇಕು.
ಜಾಲದ ಹಿಂದೆ ಇರುವ ಅಧಿಕಾರಿಗಳು, ಮಧ್ಯವರ್ತಿಗಳನ್ನು ಕಾನೂನು ಶಿಕ್ಷೆಗೆ ಗುರಿಪಡಿಸಬೇಕು. ಪರೀಕ್ಷಾ ರದ್ದತಿಯಿಂದಾಗಿ ಆರ್ಥಿಕ ಮತ್ತು ಮಾನಸಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.