ಸಿಂಧನೂರು: ತಾಲೂಕಿಗೆ ಮಂಜೂರಾಗಿರುವ 11 ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿ ಕುರಿತ ಮುಖ್ಯಶಿಕ್ಷಕರು, ಪ್ರಾಚಾರ್ಯರ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಗುರುವಾರ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಮಕ್ಕಳಲ್ಲಿ ಕಲಿಕಾಸಕ್ತಿ ಹೆಚ್ಚಿಸಬೇಕು. ಶಾಲೆಯಲ್ಲಿ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸುವುದು, ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶಿಕ್ಷಕರು ಕೆಲಸ ಮಾಡಬೇಕು ಎಂದರು.
ಅಲಬನೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಡಾ.ಎಸ್.ಶಿವರಾಜ್ ಮಾತನಾಡಿ, ಕರ್ನಾಟಕ ಪಬ್ಲಿಕ್ ಶಾಲೆಗಳು ಇರುವ ಕಡೆಗಳಲ್ಲಿ ಸರ್ಕಾರದಿಂದ ವಸತಿ ನಿಲಯಗಳನ್ನು ಆರಂಭಿಸಬೇಕು. ವಿದ್ಯಾರ್ಥಿಗಳ ಓದಿಗೆ ಅನುಕೂಲವಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ಅತಿಥಿ ಶಿಕ್ಷಕರ ಮಾದರಿಯಲ್ಲಿ ನೇಮಕ ಮಾಡಿಕೊಳ್ಳಬೇಕು ಎಂದರು.
ಪ್ರಾಚಾರ್ಯರು, ಶಿಕ್ಷಕರು ಶಾಲೆಗಳ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಡಿಡಿಪಿಯು ಸೋಮಶೇಖರಪ್ಪ ಹೊಕ್ರಾಣಿ, ತಾಪಂ ಇಒ ಚಂದ್ರಶೇಖರ, ಬಿಇಒ ಬಸವಲಿಂಗಪ್ಪ ಇತರರಿದ್ದರು.