ದೇವದುರ್ಗ: ತಾಲೂಕು ಆಡಳಿತದಿಂದ ಸ್ವಾತಂತ್ರ್ಯ ದಿನದ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಹೇಳಿದರು.
ಮಿನಿವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದರು. ಎಲ್ಲ ಇಲಾಖೆ ಅಧಿಕಾರಿಗಳು ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಎಲ್ಲ ಇಲಾಖೆ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಬೆಳಗ್ಗೆ 7ಗಂಟೆಗೆ ಎಲ್ಲ ಇಲಾಖೆ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು.
8ಗಂಟೆಗೆ ತಾಲೂಕು ಆಡಳಿತದ ಕಚೇರಿಯಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಸಾರ್ವಜನಿಕ ಕ್ಲಬ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಳ್ಳಬೇಕು. ಪುರಸಭೆಯಿಂದ ನೀರು, ನೆರಳಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಎಚ್.ಶಿವರಾಜ ಮಾತನಾಡಿ, ನಿವೃತ್ತ ಸೈನಿಕರನ್ನು ಸನ್ಮಾನಿಸಬೇಕು. ಕ್ರೀಡಾ ಸಾಧಕರು, ಉತ್ತಮ ಅಂಕಪಡೆದ ವಿದ್ಯಾರ್ಥಿಗಳನ್ನು ಗೌರವಿಸಬೇಕು ಎಂದು ಒತ್ತಾಯಿಸಿದರು.