ದೇವದುರ್ಗ: ಮುಂಗಾರು ಆರಂಭವಾಗಿ ಎರಡು ತಿಂಗಳು ಕಳೆಯುತ್ತಿದ್ದರೂ ಸಮರ್ಪಕ ಮಳೆ ಬಿದ್ದಿಲ್ಲ. ಇದರಿಂದ ರೈತಾಪಿ ವರ್ಗ ಮಾತ್ರವಲ್ಲ ಕೃಷಿ ಕೂಲಿಕಾರರು, ಗ್ರಾಮೀಣ ಭಾಗದ ಜನರು ಸಮಸ್ಯೆಗೆ ಸಿಲುಕಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಬರ ನಿರ್ಹವಣೆಗೆ ಅಧಿಕಾರಿಗಳು ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಶಾಸಕಿ ಕರೆಮ್ಮ ಜಿ.ನಾಯಕ ಸೂಚಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಬರ ನಿರ್ಹವಣೆ ಕುರಿತ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಂಗಳವಾರ ಮಾತನಾಡಿದರು.
ಪ್ರತಿಯೊಂದು ಇಲಾಖೆ ಅಧಿಕಾರಿಗಳು, ಪಿಡಿಒಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಳೆಬಾರದ ಕಾರಣ ಎಲ್ಲೆಡೆ ಕುಡಿವ ನೀರಿನ ಸಮಸ್ಯೆ ಕಾಡುವ ಸಾಧ್ಯತೆ ದಟ್ಟವಾಗಿದೆ. ಇಂಥ ಹೊತ್ತಲ್ಲಿ ನೀರಿನ ಮೂಲಗಳನ್ನು ಸಂರಕ್ಷಣೆ ಮಾಡಬೇಕು. ಶುದ್ಧ ಕುಡಿವ ನೀರು ಪೂರೈಕೆಗೆ ಆದ್ಯತೆ ನೀಡಬೇಕು. ಸಮಯಕ್ಕೆ ಸರಿಯಾಗಿ ನೀರು ಪೂರೈಸಿ ಎಲ್ಲಿಯೂ ಸಮಸ್ಯೆಯಾಗದಂತೆ ಎಚ್ಚರಿಕೆವಹಿಸಬೇಕು ಎಂದು ತಾಕೀತು ಮಾಡಿದರು.
ಜಿಪಂ ಎಇಇ ಹೀರಾಲಾಲ್ ಮಾತನಾಡಿ, ತಾಲೂಕಿನಲ್ಲಿ 171 ಶುದ್ಧ ಕುಡಿವ ನೀರಿನ ಘಟಕಗಳಿವೆ. ಈ ಪೈಕಿ 98 ಸುಸ್ಥಿತಿಯಲ್ಲಿದ್ದರೆ 73 ಕೆಟ್ಟಿವೆ. ಶೀಘ್ರ ರಿಪೇರಿ ಮಾಡಲಾಗುವುದು. 19 ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ. 52 ಗ್ರಾಮಗಳನ್ನು ಸಮಸ್ಯಾತ್ಮಕ ಹಳ್ಳಿ ಎಂದು ಗುರುತಿಸಿ ಅಗತ್ಯಕ್ರಮ ಕೈಗೊಳ್ಳಲಾಗಿದೆ ಎಂದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯಕ ಮಾತನಾಡಿ, ತಾಲೂಕಿನಲ್ಲಿ ಶೇ.50 ಮಳೆ ಕಡಿಮೆಯಾಗಿದೆ. ಖುಷ್ಕಿ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಕುಡಿವ ನೀರಿಗಾಗಿ ಎರಡು ಟಿಎಂಸಿ ಅಡಿ ನೀರು ಬಿಡುಗಡೆ ಮಾಡಲು ಕೆಬಿಜೆಎನ್‌ಎಲ್ ಮುಂದಾಗಿದೆ ಎಂದರು.
ಜಲಜೀವನ ಯೋಜನೆ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಿ ಜನರಿಗೆ ಕುಡಿವ ನೀರು ಪೂರೈಸಬೇಕು. ಪ್ರತಿ ಗ್ರಾಪಂಗೆ ಭೇಟಿ ನೀಡಿ ಪರಿಶೀಲಿಸಬೇಕು. ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರ ಕಟ್ಟಡಗಳ ಪರಿಶೀಲನೆ ಮಾಡಬೇಕು. ಹಳೇ ಕಟ್ಟಡವಿದ್ದರೆ ಸುರಕ್ಷತಾ ಕ್ರಮಕೈಗೊಳ್ಳಬೇಕು. ಮಕ್ಕಳಿಗೆ ಸೂಕ್ತ ಸಮಯದಲ್ಲಿ ಪಠ್ಯಪುಸ್ತಕ, ಬಿಸಿಯೂಟ ಸೇರಿ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಬೇಕೆಂದು ಜೆಸ್ಕಾಂ ಅಧಿಕಾರಿಗೆ ಶಾಸಕಿ ಸೂಚಿಸಿದರು.
ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ, ಅರಕೇರಾ ತಹಸೀಲ್ದಾರ್ ಅಮರೇಶ ಬಿರಾದಾರ್, ತಾಪಂ ಇಒ ಕೆ.ರಾಜೇಂದ್ರಕುಮಾರ್, ಸಹಾಯಕ ನಿರ್ದೇಶಕಿ ಶರ್ಫುನ್ನೀಸಾ ಬೇಗಂ, ಅರಕೇರಾ ತಾಪಂ ಇಒ ಡಾ.ಯಮನಪ್ಪ ವಾಲ್ಮೀಕಿ ಹಾಗೂ ವಿವಿಧ ಗ್ರಾಪಂ ಪಿಡಿಒಗಳು ಇದ್ದರು.