ಮಸ್ಕಿ ತಾಪಂ ಕಚೇರಿ ಸಭಾಂಗಣದಲ್ಲಿ ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಶಾಸಕ ಆರ್.ಬಸನಗೌಡ ತುರ್ವಿಹಾಳ, ತಾಪಂ ಇಒ ಅಮರೇಶ ಯಾದವ್, ಜಿಲ್ಲಾ ಯೋಜನಾಧಿಕಾರಿ ಡಾ.ಟಿ.ರೋಣಿ, ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಇದ್ದರು.
ಮಸ್ಕಿ: ಸರ್ಕಾರ ಹೊಸದಾಗಿ ರಚಿಸಿರುವ ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಬಸನಗೌಡ ತುರ್ವಿಹಾಳ ಸೂಚಿಸಿದರು.
ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ರಚನೆ ಮಾಡಿದೆ. ಪಿಡಿಒಗಳು ಇಲಾಖೆವಾರು ಅಭಿವೃದ್ಧಿ ಯೋಜನೆಗಳ ಕರಡು ಪ್ರತಿ ಸಲ್ಲಿಸಬೇಕು ಎಂದರು.
ತಾಪಂ ಇಒ ಅಮರೇಶ ಯಾದವ್ ಮಾತನಾಡಿ, ತಾಲೂಕಿನ ಒಟ್ಟು 21 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 50.71 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕರಡು ಪ್ರತಿಗಳನ್ನು ಪಿಡಿಒಗಳು ಸಲ್ಲಿಸಿದ್ದಾರೆ ಎಂದು ತಿಳಿಸಿದರು.