

ಬೆಂಗಳೂರು: ರಾಜ್ಯದಲ್ಲೆಡೆ ಶನಿವಾರವೂ ಮಳೆ ಅಬ್ಬರ ಜೋರಾಗಿತ್ತು. ಮಲೆನಾಡು,ಕರಾವಳಿ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಜೋರಾಗಿ ಬಿದ್ದಿದೆ.
24 ಗಂಟೆ ಅವಧಿಯಲ್ಲಿ ಶಿವಮೊಗ್ಗದ ಆಗುಂಬೆ, ದಕ್ಷಿಣ ಕನ್ನಡದ ಮಂಗಳೂರು ವಿಮಾನ ನಿಲ್ದಾಣ, ಉಪ್ಪಿನಂಗಡಿ, ಬೆಳ್ತಂಗಡಿ, ಉತ್ತರ ಕನ್ನಡದ ಭಟ್ಕಳ, ಶಕ್ತಿನಗರ, ಗೇರುಸೊಪ್ಪದಲ್ಲಿ 100 ಮಿಮೀ ಮಳೆಯಾಗಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯಾಯಿತು.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 2 ದಿನ ಹಾಗೂ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಜೂ.15ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದೆ. ಈ ಮೇಲಿನ ಜಿಲ್ಲೆಗಳಲ್ಲಿ ಜೂ.17ರಿಂದ ಮುಂದಿನ 2 ದಿನ ಆರೆಂಜ್ ಅಲರ್ಟ್ ಇರಲಿದೆ. ಪ್ರತಿ ಗಂಟೆಗೆ 40- 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ, ಮೈಸೂರಿನಲ್ಲಿ ಜೂ.15ರಂದು ಧಾರಾಕಾರವಾಗಿ ಮಳೆಯಾಗುವುದರಿಂದ ಆರೆಂಜ್ ಅಲರ್ಟ್ ಕೊಡಲಾಗಿದೆ. ಬೀದರ್, ಕಲಬುರಗಿಯಲ್ಲಿ ಜೂ.16ರಂದು ಯೆಲ್ಲೋ ಅಲರ್ಟ್ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ವರ್ಷಧಾರೆಯಾಗಲಿದೆ.
ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಮತ್ತು 21 ಡಿ.ಸೆ. ಇರಲಿದೆ. ಜೂ.19ರಿಂದ ಮಳೆ ಇಳಿಮುಖವಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.