ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿ ಕೇಂದ್ರ ಅಧ್ಯಯನ ತಂಡದಿಂದ ಪರಿಶೀಲನೆ

mng--8 sep Central team
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಅಧ್ಯಯನಕ್ಕೆ ಕೇಂದ್ರ ಸರ್ಕಾರದ ಅಂತರ್ ಸಚಿವಾಲಯದ ಅಧಿಕಾರಿಗಳ ತಂಡ ಗುರುವಾರ ವಿವಿಧ ಕಡೆಗಳಿಗೆ ಭೇಟಿ ನೀಡಿ ಹಾನಿಗೀಡಾದ ಕಡಲ ತೀರ, ರಸ್ತೆ, ಸೇತುವೆ, ಮನೆಗಳನ್ನು ಪರಿಶೀಲಿಸಿತು.


ಜಿಲ್ಲೆಯಲ್ಲಿ ಜುಲೈನಿಂದ ಸುರಿದ ತೀವ್ರ ಮಳೆಯಿಂದಾಗಿ ಕೃಷಿ ಹಾಗೂ ತೋಟಗಾರಿಕಾ ಬೆಳಗಳು, ಮೂಲಭೂತ ಸೌಕರ್ಯಗಳು, ಬೆಳೆ, ಮಾನವ ಹಾಗೂ ಜಾನುವಾರುಗಳ ಜೀವ ಹಾನಿ ಬಗ್ಗೆ ಅಧ್ಯಯನ ತಂಡಕ್ಕೆ ನಗರದ ಖಾಸಗಿ ಹೊಟೇಲ್‌ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದರು.


ತಂಡ ಬುಧವಾರ ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಹಾನಿ ಪರಿಶೀಲನೆ ನಡೆಸಿ ಸಂಪಾಜೆ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರವೇಶಿತ್ತು. ಸಂಪಾಜೆ, ಸುಳ್ಯ, ಸುಬ್ರಹ್ಮಣ್ಯ, ಹರಿಹರ, ಕೊಲ್ಲಮೊಗರು, ಕಡಬ ಮೊದಲಾದ ಕಡೆಗಳಲ್ಲಿ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿ ಸಂಜೆ ಮಂಗಳೂರು ತಲುಪಿತ್ತು.


ಕಡಲ್ಕೊರೆತ ಪ್ರದೇಶಕ್ಕೆ ಭೇಟಿ
ವಿಪರೀತ ಕಡಲ್ಕೊರೆತ ಉಂಟಾಗಿರುವ ಉಳ್ಳಾಲದ ಬಟ್ಟಪ್ಪಾಡಿಗೆ ತೆರಳಿ ಅಲ್ಲಿನ ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿತು. ಕಡಲ್ಕೊರೆತದಿಂದಾದ ಮನೆ, ರಸ್ತೆಗಳಿಗೆ ಉಂಟಾಗಿರುವ ಹಾನಿ ವೀಕ್ಷಿಸಿದ ತಂಡದ ಸದಸ್ಯರು ಸ್ಥಳೀಯರ ಜತೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ನಂತರ ಹೊಸಬೆಟ್ಟು-ಮೀನಕಳಿಯ ಮೊದಲಾದ ಕಡೆಗೆ ತೆರಳಿದ ಅವರು ಕಡಲ್ಕೊರೆತ, ರಸ್ತೆ ಹಾನಿ, ತೀವ್ರ ಮಳೆಯಿಂದಾಗಿ ಮನೆಗಳಿಗಾದ ಹಾನಿ ಸೇರಿದಂತೆ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿದರು.


ಜಿಲ್ಲೆಯಲ್ಲಿ ಅಧಿಕ ಮಳೆಯಿಂದ ಉಂಟಾದ ಕಡಲ್ಕೊರೆತದಿಂದ ಹಾಗೂ ಇತರೆ ಹಾನಿಗಳ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದ ತಂಡವು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿತು.
ತಂಡದ ಮುಖ್ಯಸ್ಥರಾಗಿರುವ ಗೃಹ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್, ಕೇಂದ್ರ ಹಣಕಾಸು ಸಚಿವಾಲಯದ ಉಪ ನಿರ್ದೇಶಕ ಮಹೇಶ್ ಕುಮಾರ್, ಕೇಂದ್ರ ಇಂಧನ ಸಚಿವಾಲಯದ ಸಹಾಯಕ ನಿರ್ದೇಶಕಿ ಭವ್ಯ ಪಾಂಡೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಡಾ.ಮನೋಜ್ ರಾಜನ್ ಇದ್ದರು.


ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ, ತಹಶೀಲ್ದಾರ್ ಪುಟ್ಟರಾಜ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತ ವಿಜಯ್ ಕುಮಾರ್ ಪೂಜಾರ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net