ನಗರಸಭೆ ಅಧ್ಯಕ್ಷರಿಂದ ಮಳೆಹಾನಿ ಸ್ಥಳ ಪರಿಶೀಲನೆ

NELA 1
Published on

ವಿಜಯವಾಣಿ ಸುದ್ದಿಜಾಲ ನೆಲಮಂಗಲ

ನಗರದಲ್ಲಿ ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾಗಿದ್ದ ಪ್ರದೇಶಗಳಿಗೆ ನಗರಸಭೆ ಅಧ್ಯಕ್ಷೆ ಪೂರ್ಣಿಮಾ ಸುಗ್ಗರಾಜು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ನಗರದ ಕೆರೆ ಏರಿ ಹಿಂಭಾಗದ ಎಲೆತೋಟ, ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ ಮಳೆ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡ ಹಿನ್ನೆಲೆಯಲ್ಲಿ ನಗರದ ವಾಜರಹಳ್ಳಿ ರಸ್ತೆಯಲ್ಲಿನ ಶೇಷು ಬಡಾವಣೆ, ಎಂ.ಜಿ.ರಸ್ತೆಯಲ್ಲಿ ಅಗತ್ಯ ಕ್ರಮವಹಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದರು. ಕೆರೆ ಏರಿ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿ ತಾತ್ಕಾಲಿಕವಾಗಿ ರಸ್ತೆಗೆ ವೆಟ್‌ಮಿಕ್ಸ್ ಹಾಕುವ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸಿದರು.

ಎಇಇ ನಾಗಲಿಂಗಪ್ಪ ಬಡಿಗೇರ್ ಮಾತನಾಡಿ, ನಗರದ ರಾಜಕಾಲುವೆ ಇಕ್ಕೆಲಗಳಲ್ಲಿ ತಡೆಗೋಡೆ ನಿರ್ಮಿಸಿದ್ದು, ಮಳೆ ನೀರು ಹರಿದು ಹೋಗಲು ಸಾಧ್ಯವಾಗದೆ ರಸ್ತೆಯಲ್ಲಿ ನೀರು ನಿಂತು ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ತಡೆಗೋಡೆ ಯಂತ್ರದಿಂದ ರಂಧ್ರ ಕೊರೆದು ಮಳೆಯ ನೀರು ಸರಾಗವಾಗಿ ಹರಿದುಹೋಗುವಂತೆ ಮಾಡಲಾಗುತ್ತಿದೆ ಎಂದರು.

ಅಭಿವೃದ್ಧಿ ಕಾಮಗಾರಿ ವೀಕ್ಷಣೆ ನಗರದ ವಿವಿಧ ವಾರ್ಡ್‌ಗಳಲ್ಲಿ ನಗರಸಭೆ ಅನುದಾನದಡಿ ಪೂರ್ಣಗೊಳಿಸಿದ್ದ ಅಭಿವೃದ್ಧಿ ಕೆಲಸಗಳ ಜತೆಗೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ವೀಕ್ಷಣೆ ಮಾಡಿದ್ದು ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ನಗರಸಭೆ ಅಧ್ಯಕ್ಷೆ ತಿಳಿಸಿದರು.

ಸೇತುವೆ ನಿರ್ಮಿಸಿ ಶಾಶ್ವತ ಪರಿಹಾರ ನಗರದ ಬೆತ್ತನಗೆರೆ ರಸ್ತೆ, ಎಂ.ಜಿ.ರಸ್ತೆ. ವಾಜರಹಳ್ಳಿ ರಸ್ತೆ, ಭಕ್ತನಪಾಳ್ಯದ ರಸ್ತೆಯಲ್ಲಿನ ಸೇತುವೆಗಳು ಕಿರಿದಾಗಿದ್ದು, ಮಳೆ ನೀರು ಸರಾಗವಾಗಿ ಹರಿದುಹೋಗದೆ ಮಳೆಗಾಲದಲ್ಲಿ ಕೆಲ ಬಡಾವಣೆಗಳು, ರಸ್ತೆಗಳು, ಜಲಾವೃತಗೊಂಡು ಅವಾಂತರ ಸೃಷ್ಟಿ ಆಗುತ್ತಿರುವ ಬಗ್ಗೆ ಶಾಸಕ ಎನ್.ಶ್ರೀನಿವಾಸ್ ಅವರ ಗಮನಕ್ಕೆ ತರಲಾಗಿದೆ. ಶೀಘ್ರದಲ್ಲಿ ಸೇತುವೆ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದ್ದು, ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ನಗರಸಭೆ ಅಧ್ಯಕ್ಷೆ ಪೂರ್ಣಿಮಾ ಸುಗ್ಗರಾಜು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net